ಬೆಂಗಳೂರು: ಉಡುಪಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿದ ಪ್ರಕರಣದಲ್ಲಿ ಗಂಭೀರವಾದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಸಂಬಂಧ ಎಫ್ಐಆರ್ ದಾಖಲಾಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿಯೊಬ್ಬರು ಮಾಡುತ್ತಿದ್ದಾರೆ ಎಂದಿದ್ದಾರೆ.
ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಬರುವುದಿಲ್ಲ. ತನಿಖೆಯಾಗಿ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರು, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರೊಬ್ಬರು ಕಾನೂನನ್ನು ಕೈಗೆ ತೆಗೆದುಕೊಳ್ಳುವಂತೆ ಇಲ್ಲ. ರಾಜ್ಯದ ಜನರಿಗೆ ಸುರಕ್ಷತೆ, ನೆಮ್ಮದಿಯ ಬದುಕು ಕಲ್ಪಿಸುವುದು ನಮ್ಮ ಕರ್ತವ್ಯ. ಪೊಲೀಸರಿಗೆ ಸೂಚಿಸಿದ್ದೇನೆ. ಎಂದಿದ್ದಾರೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿ, ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಓದಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದಿದ್ದಾರೆ.