Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಬಡವರಿಗೆ 10 ಸಾವಿರ ಉಚಿತ ನಿವೇಶನ : ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

---Advertisement---

ಯೂರು ಕ್ಷೇತ್ರದಲ್ಲಿ 10 ಸಾವಿರ ಬಡವರಿಗೆ ಉಚಿತವಾಗಿ ನಿವೇಶನ ಹಂಚುವ ಬೃಹತ್ ಯೋಜನೆ ರೂಪಿಸಲಾಗುತ್ತಿದೆ. ನಾನೇ ಖುದ್ದಾಗಿ ಪ್ರಜಾಸೇವೆ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೂ ಅರ್ಜಿ ತಲುಪಿಸಿ ಅರ್ಹರಿಗೆ ಸೈಟ್ ಹಂಚಿಕೆ ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಹಿರಿಯೂರು ನಗರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಒಕ್ಕಲಿಗರ ಸಮುದಾಯ ಭವನ ನಿರ್ಮಾಣ ಹಾಗೂ ಮೊದಲ ಹಂತದ ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ವರ್ಷ ರಾಜ್ಯಾದ್ಯಂತ 5 ಲಕ್ಷ ನಿವೇಶನಗಳನ್ನು ಹಂಚಲು ವಸತಿ ಸಚಿವ ಜಮೀರ್ ಅಹಮದ್ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಚಿತ್ರದುರ್ಗ ಜಿಲ್ಲೆಗೆ ಒಟ್ಟಾರೆಯಾಗಿ ₹5,000 ಕೋಟಿಗೂ ಹೆಚ್ಚಿನ ಅನುದಾನ ತರಲಾಗಿದೆ ಎಂದು ತಿಳಿಸಿದ ಅವರು, ಇಂದು ಒಂದೇ ದಿನ ಹಿರಿಯೂರು ತಾಲೂಕಿನಲ್ಲಿ ₹2,350 ಕೋಟಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ₹100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಮೂಲಕ ರೈತರ ಬದುಕಿಗೆ ಹೊಸ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ನನ್ನ ಮಿತ್ರ ಸುಧಾಕರ್ ಅವರು ಇಂದು ನಮ್ಮೊಂದಿಗಿಲ್ಲ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿದ್ದರು. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಹುಟ್ಟು-ಸಾವಿನ ಮಧ್ಯೆ ನಾವು ಮಾಡುವ ಸಾಧನೆಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ನಿಜಲಿಂಗಪ್ಪನವರ ಕಾಲದ ಚಿಂತನೆ, ಎಸ್.ಎಂ. ಕೃಷ್ಣ ಅವರ ಕಾಲದ ಬುನಾದಿ ಹಾಗೂ ಸುಧಾಕರ್ ಅವರ ಹೋರಾಟದ ಫಲವಾಗಿ ಇಂದು ಈ ತಾಲೂಕಿನ ರೈತರಿಗೆ ಹೊಸ ಭರವಸೆ ಮೂಡಿದೆ ಎಂದರು.

‌‌ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ₹52,000 ಕೋಟಿ ವೆಚ್ಚ ಮಾಡಲಾಗುತ್ತಿದೆ. ರೈತರ ಉಚಿತ ವಿದ್ಯುತ್‌ಗಾಗಿ ₹30,000 ಕೋಟಿ ಭರಿಸಲಾಗುತ್ತಿದೆ. ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಚುನಾವಣೆಗೆ ಮುನ್ನ ಕೊಟ್ಟ ಮಾತನ್ನು ಪ್ರತಿ ಕ್ಷಣವೂ ಈಡೇರಿಸುತ್ತಿದ್ದೇವೆ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಮಾತನಾಡಿ, ಹಿರಿಯೂರು ನಗರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿದ್ದ ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ಕನಸನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ದಿವಂಗತ ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದರು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ನಿರಂತರವಾಗಿ ಶ್ರಮಿಸುತ್ತಿದ್ದರು. ಅವರ ಆಶಯದಂತೆ ಇಂದು ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿ ಒಟ್ಟು ₹2,167 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ ಎಂದು ಸಚಿವರು ಹೇಳಿದರು.

ಹಿರಿಯೂರು ನಗರ ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆ ಮತ್ತು ನೀರಿನ ಬಳಕೆ ಹೆಚ್ಚುತ್ತಿದೆ. ಕಲುಷಿತ ನೀರು ನೇರವಾಗಿ ವೇದಾವತಿ ನದಿಯನ್ನು ಸೇರುತ್ತಿದ್ದು, ನದಿ ನೀರು ಕಲುಷಿತಗೊಳ್ಳುತ್ತಿತ್ತು. ನದಿ ಮೂಲದ ರಕ್ಷಣೆ ಸರ್ಕಾರದ ಕರ್ತವ್ಯ. ಹೀಗಾಗಿ ನದಿ ಕಲುಷಿತಗೊಳ್ಳುವುದನ್ನು ತಡೆಯಲು ಯುಜಿಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಮಾಡಲಾಗುತ್ತಿದೆ ಎಂದರು.

ನಗರದಲ್ಲಿ ಮೊದಲ ಹಂತದ ಒಳಚರಂಡಿ ಕಾಮಗಾರಿಗೆ ₹108 ಕೋಟಿ ಅನುದಾನ ನೀಡಲಾಗಿದೆ. ಎರಡನೇ ಹಂತದಲ್ಲೂ ₹100 ಕೋಟಿ ನೀಡಲಿದ್ದು, ಒಟ್ಟು ₹203 ಕೋಟಿ ವೆಚ್ಚದಲ್ಲಿ ಪೂರ್ಣ ಪ್ರಮಾಣದ ಒಳಚರಂಡಿ ಯೋಜನೆ ಅನುಷ್ಠಾನಗೊಳ್ಳಲಿದೆ. ಅಲ್ಲದೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ₹15 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ನೀರು ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಇದರೊಂದಿಗೆ ₹5 ಕೋಟಿ ವೆಚ್ಚದಲ್ಲಿ ಒಕ್ಕಲಿಗರ ಭವನ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗಾಗಿ ವರ್ಷಕ್ಕೆ ₹52,000 ಕೋಟಿ ವೆಚ್ಚ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ಹೊಸ ಉತ್ಸಾಹದೊಂದಿಗೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ಮಾತನಾಡಿ,
ಸಮಾಜದ ಬಡವರು, ಶೋಷಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ತಲುಪಿಸುವ ಕೆಲಸಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಹಿರಿಯೂರು ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ನಿಗಮಗಳಿಂದ ಸುಮಾರು 1,500 ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಾಬು ಜಗಜೀವನ್ ರಾಂ ನಿಗಮ, ತಾಂಡ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಚರ್ಮ ಅಭಿವೃದ್ಧಿ ನಿಗಮಗಳ ಮೂಲಕ ಯೋಜನೆಗಳನ್ನು ತಲುಪಿಸಲಾಗುತ್ತಿದೆ. ಕೊಳವೆ ಬಾವಿ ಕೊರೆಸುವುದು, ‘ಸಾರಥಿ’ ಯೋಜನೆಯಡಿ ಕಾರು ಖರೀದಿ, ಮನೆ ನಿರ್ಮಾಣ ಹಾಗೂ ಸ್ವಯಂ ಉದ್ಯೋಗಕ್ಕಾಗಿ ತಲಾ ₹1 ಲಕ್ಷ ಧನಸಹಾಯ ನೀಡುವ ಮೂಲಕ ಬಡವರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲಲು ದಾರಿ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ದಿ.ಮಾಜಿ ಸಚಿವ ಸುಧಾಕರ್ ಅವರು ನನಗೆ ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದರು.

ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಹಾಗೂ ಚಳ್ಳಕೆರೆಯಿಂದ ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಸರಳತೆ ಮತ್ತು ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು. ಅವರು ಅಕಾಲಿಕವಾಗಿ ನಮ್ಮನ್ನಗಲಿರುವುದು ನಮಗೆಲ್ಲರಿಗೂ ತೀವ್ರ ಆಘಾತ ತಂದಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯೂರು ಕ್ಷೇತ್ರವನ್ನು ತಮ್ಮ ಸ್ವಕ್ಷೇತ್ರ ಕನಕಪುರದಂತೆಯೇ ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಸುಧಾಕರ್ ಅವರ ಅಭಿವೃದ್ಧಿಯ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಸಂಪೂರ್ಣವಾಗಿ ಶ್ರಮಿಸಲಿದೆ ಎಂದು ಖಂಡ್ರೆ ಹೇಳಿದರು.

ಗ್ರಾಮಠಾಣ ವ್ಯಾಪ್ತಿಯಲ್ಲಿ ತಲೆತಲಾಂತರಗಳಿಂದ ವಾಸಿಸುತ್ತಿದ್ದರೂ ದಾಖಲೆಗಳಿಲ್ಲದ ಮನೆಗಳಿಗೆ ಹಕ್ಕುಪತ್ರ ನೀಡುವ ‘ಆರನೇ ಗ್ಯಾರಂಟಿ’ ಯೋಜನೆ ಜಾರಿಗೆ ತರಲಾಗಿದೆ. ಕಾಯ್ದೆ ತಿದ್ದುಪಡಿ ಮೂಲಕ ಈಗಾಗಲೇ 50 ಲಕ್ಷ ಈ-ಸ್ವತ್ತು ವಿತರಿಸಲಾಗಿದ್ದು, ಶೀಘ್ರದಲ್ಲೇ ಒಟ್ಟು 40 ಲಕ್ಷ ಜನರಿಗೆ ಮನೆಬಾಗಿಲಿಗೆ ಈ-ಸ್ವತ್ತು ತಲುಪಿಸುವ ಗುರಿ ಹೊಂದಲಾಗಿದೆ ಎಂದರು.

ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. ಪ್ರತಿ ಕ್ಷೇತ್ರಕ್ಕೆ ₹1 ಕೋಟಿಯಂತೆ ₹189 ಕೋಟಿ ಸೇರಿದಂತೆ ಒಟ್ಟು ₹306 ಕೋಟಿಗೂ ಅಧಿಕ ಅನುದಾನವನ್ನು ಕುಡಿಯುವ ನೀರಿನ ಯೋಜನೆಗಳಿಗೆ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಹಣದ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ನಂಜಾವಧೂತ ಸ್ವಾಮೀಜಿ ಆಶೀರ್ವಚನ ನೀಡಿದರು.‌
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ , ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ, ಸಣ್ಣ ನೀರಾವರಿ ಸಚಿವ ಅಜಯ್ ಸಿಂಗ್, ಮುಜುರಾಯಿ ಖಾತೆ ಸಚಿವ ಬಸಂತಪ್ಪ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ,ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಬೊವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಬಿ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಆರೊಗೆರೆ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಶಾಸಕ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ಶಿವಣ್ಣ ಆರ್. ಗಂಜಿಗಟ್ಟೆ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‌ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now