Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ 101 ತಾಲೂಕು ಬರಪೀಡಿತ ಘೋಷಣೆ: 89 ಕಡೆ ತೀವ್ರ ಬರ; ಚಿತ್ರದುರ್ಗದ 3 ತಾಲೂಕುಗಳು ಪಟ್ಟಿಯಲ್ಲಿ!

---Advertisement---

ಬೆಂಗಳೂರು, ಆ. 27: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಇದರಲ್ಲಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಉಳಿದ 32 ತಾಲೂಕುಗಳ ಕುರಿತು ಪರಿಶೀಲನೆ ಮುಂದುವರಿದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ ಗಂಭೀರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಜೂನ್ 1ರಿಂದ ಆಗಸ್ಟ್ 26ರವರೆಗೆ ರಾಜ್ಯದಲ್ಲಿ ಸಾಮಾನ್ಯವಾಗಿ 666 ಮಿ.ಮೀ. ಮಳೆಯಾಗಬೇಕಾಗಿದ್ದರೆ, ಕೇವಲ 465 ಮಿ.ಮೀ. ಮಳೆಯಾಗಿದ್ದು, ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ-2020ರ ಮಾರ್ಗಸೂಚಿಗಳ ಆಧಾರದಲ್ಲಿ ಬರ ಪರಿಸ್ಥಿತಿಯ ಮೌಲ್ಯಮಾಪನ ನಡೆಸಲಾಗಿದೆ. ಸತತ ಮೂರು ವಾರಕ್ಕೂ ಹೆಚ್ಚು ಕಾಲ ಒಣಹವೆ ಎದುರಿಸಿದ 134 ತಾಲೂಕುಗಳು ಪ್ರಾಥಮಿಕವಾಗಿ ಅರ್ಹತೆ ಪಡೆದಿದ್ದು, ಬೆಳೆಗಳ ಸ್ಥಿತಿ, ಮಣ್ಣಿನ ತೇವಾಂಶ, ಅಂತರ್ಜಲ ಮಟ್ಟ, ಬಿತ್ತನೆ ಪ್ರಮಾಣ ಸೇರಿದಂತೆ ವಿವಿಧ ಅಂಶಗಳ ಪರಿಶೀಲನೆ ಬಳಿಕ 101 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಹಿರಿಯೂರು ಹಾಗೂ ಹೊಸದುರ್ಗ ತಾಲೂಕುಗಳೂ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸೇರಿವೆ. ಇದರಿಂದ ಈ ಭಾಗದ ರೈತರಿಗೆ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಸರ್ಕಾರದಿಂದ ಅಗತ್ಯ ನೆರವು ದೊರೆಯುವ ನಿರೀಕ್ಷೆ ಮೂಡಿದೆ.ಬರ ಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಬೆಳೆ ನಷ್ಟ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸಿ ಅಗತ್ಯ ಪರಿಹಾರ ಹಾಗೂ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬರ ನಿರ್ವಹಣೆಗೆ ಈಗಾಗಲೇ ₹635 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಬರ ಪರಿಸ್ಥಿತಿ ಮತ್ತಷ್ಟು ಉಲ್ಬಣಿಸದಂತೆ ಕುಡಿಯುವ ನೀರು, ಮೇವು ಹಾಗೂ ಇತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಮಳೆ ಕೊರತೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ 758 ಗ್ರಾಮಗಳಿಗೆ 149 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, 714 ಖಾಸಗಿ ಬೋರ್‌ವೆಲ್‌ಗಳನ್ನು ಬಳಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ 2,059 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಇದೇ ವೇಳೆ ರಾಜ್ಯದ 132 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಜಲಾಶಯಗಳಲ್ಲಿನ ನೀರಿನ ಸಂಗ್ರಹವೂ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಹೀಗಾಗಿ ಜನರು ನೀರನ್ನು ಮಿತವಾಗಿ ಬಳಸಬೇಕು ಹಾಗೂ ಅಂತರ್ಜಲ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ಮನವಿ ಮಾಡಿದೆ. ಬರ ಪರಿಸ್ಥಿತಿಯನ್ನು ಪ್ರತಿ 15 ದಿನಗಳಿಗೊಮ್ಮೆ ಪರಿಶೀಲಿಸಿ, ಅಗತ್ಯವಿರುವ ತಾಲೂಕುಗಳನ್ನು ಮುಂದಿನ ಹಂತದಲ್ಲಿ ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆಯೂ ಇದೆ ಎಂದು ಸರ್ಕಾರ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now