ಚಿತ್ರದುರ್ಗ.ಜ.31: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ನೊಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ. ಉಳಿದ ಗ್ಯಾರಂಟಿ ಯೋಜನೆಗಳು ಸಹ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ. ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಕಚೇರಿಯನ್ನು ನಗರದ ಜಿ.ಪಂ.ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ನೂತನ ಕಚೇರಿಯನ್ನು ಫೆ.01 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.
ಈ ಕುರಿತು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ಸಂಸದ ಗೋವಿಂದ ಎಂ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಡಿ.ಟಿ.ಶ್ರೀನಿವಾಸ್, ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ನಗರ ಸಭೆ ಅಧ್ಯಕ್ಷೆ ಬಿ.ಎಂ.ಸುಮಿರಾ ರಾಘವೇಂದ್ರ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಓ ಸೋಮಶೇಖರ್ ಸೇರಿದಂತೆ ಪ್ರಾಧಿಕಾರದ ಜಿಲ್ಲಾ ಸಮಿತಿಯ ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಪಾಲ್ಗೊಳ್ಳುವರು ಎಂದು ಆರ್.ಶಿವಣ್ಣ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪಕ್ಷಿನೋಟ:
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 3,78,084 ಫಲಾನುಭವಿಗಳ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿ ತಿಂಗಳು ಸರಿ ಸುಮಾರು ರೂ.14 ಕೋಟಿ ವ್ಯಯಿಸಲಾಗುತ್ತಿದೆ. ಕಳೆದ 17 ತಿಂಗಳಿನಲ್ಲಿ ರೂ.234 ಕೋಟಿ ಅಧಿಕ ಹಣವನ್ನು ಯೋಜನೆಗಾಗಿ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮೀ ಯೋಜನೆಯಡಿ 3,96,025 ಫಲಾನುಭವಿಗಳಿಗೆ ಪ್ರತಿ ತಿಂಗಳು ಡಿಬಿಟಿ ಮೂಲಕ ರೂ.2000 ಖಾತೆಗೆ ಜಮೆ ಮಾಡಲಾಗುತ್ತಿದೆ. ಇದರ ಮೊತ್ತ ರೂ.1092 ಕೋಟಿಗೂ ಅಧಿಕವಾಗಿದೆ. ಅನ್ನಭಾಗ್ಯ ಯೋಜನೆಯಡಿ 3,65,890 ಫಲಾನುಭವಿಗಳಿಗೆ 7014 ಮೆಟ್ರಿಕ್ ಟನ್ ಅಕ್ಕಿ ನೀಡಲಾಗಿದೆ. 5 ಕೆ.ಜಿ ಅಕ್ಕಿ ಪರ್ಯಾಯವಾಗಿ ರೂ.170 ರಂತೆ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ರೂ.20 ಕೋಟಿ ಜಮೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಚಿತ್ರದುರ್ಗ ವಿಭಾಗದ ಬಸ್ಗಳಲ್ಲಿ ಪ್ರತಿನಿತ್ಯ 62,000 ಕ್ಕೂ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇದಕ್ಕಾಗಿ ರೂ.147.13 ಕೋಟಿ ಹಣವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಸರ್ಕಾರ ಪಾವತಿಸಿದೆ. ಜಿಲ್ಲೆಯಲ್ಲಿ 26,086 ಪದವಿ ಹಾಗೂ 291 ಡಿಪ್ಲೋಮೊ ವ್ಯಾಸಾಂಗ ಪೂರ್ಣಗೊಳಿಸಿದ ಯುವಕರು ಯುವನಿಧಿಯಡಿ ನೊಂದಣಿ ಮಾಡಿಕೊಂಡಿದ್ದಾರೆ. ಪದವಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರಿಗೆ ರೂ.3000 ಹಾಗೂ ಡಿಪ್ಲೋಮೊ ಮುಗಿಸಿದವರಿಗೆ ರೂ.1,500 ಮಾಸಿಕ ನಿರುದ್ಯೋಗ ಭತ್ಯ ನೀಡಲಾಗುತ್ತಿದೆ. ಇದುವರೆಗೂ ರೂ.7.8 ಕೋಟಿ ಯುವನಿಧಿಯಡಿ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.
ಸಭೆಯಲ್ಲಿ ಜಿ.ಪಂ.ಸಿಇಓ ಸೋಮಶೇಖರ್ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿ.ಪಂ.ಸಿಪಿಓ ಗಾಯತ್ರಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಖಾದಿ.ಜೆ.ರಮೇಶ್, ನಾಗೇಶ್ ರೆಡ್ಡಿ, ಸದಸ್ಯರಾದ ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯ ಮದಸೀರ್ ನವಾಜ್ ಉಪಸ್ಥಿತರಿದ್ದರು.