ಕೊಪ್ಪಳ : ವಾಹನ ಸವಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಂಚಾರಿ ನಿಯಮ ಉಲ್ಲಂಘನೆ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದ ಹಳೆಯ ಬಾಕಿ ಪ್ರಕರಣಗಳ ದಂಡ ಪಾವತಿಗೆ ಶೇ. 50ರಷ್ಟು ವಿಶೇಷ ರಿಯಾಯಿತಿ ಘೋಷಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ತಿಳಿಸಿದ್ದಾರೆ.
21 ದಿನಗಳ ವಿಶೇಷ ಅವಕಾಶ: ರಾಜ್ಯದಲ್ಲಿ 1991ರಿಂದ 2025ರವರೆಗೆ ದಾಖಲಾಗಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಸಂಚಾರಿ ಇ-ಚಲನ್ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ. ನವೆಂಬರ್ 21 ರಿಂದ ಡಿಸೆಂಬರ್ 11ರವರೆಗೆ ಒಟ್ಟು 21 ದಿನಗಳ ಕಾಲ ಸಾರ್ವಜನಿಕರಿಗೆ ಈ ಸೌಲಭ್ಯ ಲಭ್ಯವಿರಲಿದೆ. ವಾಹನ ಸವಾರರು ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಅಥವಾ ಆನ್ಲೈನ್ ಮೂಲಕ ದಂಡ ಪಾವತಿಸಿ, ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮನವಿ ಮಾಡಲಾಗಿದೆ.
ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್: ಡಿಸೆಂಬರ್ 12ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಯಾವೆಲ್ಲಾ ಪ್ರಕರಣಗಳು ಇತ್ಯರ್ಥಕ್ಕೆ ಅರ್ಹ? ಸಿವಿಲ್ ದಾವೆಗಳು, ಭೂ-ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯ ಶುಲ್ಕ ವಾಪಸ್: ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥಗೊಂಡರೆ ಇಬ್ಬರಿಗೂ ಒಪ್ಪಿಗೆಯಾಗುವಂತೆ ಕೊನೆಗೊಳ್ಳುವುದಲ್ಲದೆ, ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ವಾಪಸ್ ನೀಡಲಾಗುವುದು.
ಆದ್ದರಿಂದ ಸಾರ್ವಜನಿಕರು ಹಾಗೂ ಪಕ್ಷಗಾರರು ಈ ವಿಶೇಷ ರಿಯಾಯಿತಿ ಹಾಗೂ ರಾಷ್ಟ್ರೀಯ ಲೋಕ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.











