ಸುದ್ದಿಒನ್,ಬೆಂಗಳೂರು,ಮೇ.13: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ವರುಣನ ಅಬ್ಬರ ಜೋರಿರಲಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೇ 14 ರಿಂದ 16 ರವರೆಗೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ.
ಕರ್ನಾಟಕದ ಒಟ್ಟು 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಒಂದೆಡೆ ಮಳೆಯ ಆರ್ಭಟವಿದ್ದರೆ, ಇನ್ನೊಂದೆಡೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ. ಉಷ್ಣ ಅಲೆಯ (Heat Wave) ಹಿನ್ನೆಲೆಯಲ್ಲಿ ಕರಾವಳಿಯ ಎರಡು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಬಿಸಿಲು ಮತ್ತು ಬಿರುಗಾಳಿ ಸಹಿತ ಮಳೆ ಎರಡೂ ಕಂಡುಬರುವ ಸಾಧ್ಯತೆ ಇದೆ.









