ಬೆಂಗಳೂರು: 2026-27ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಮಹಿಳಾ ಅತಿಥಿ ಉಪನ್ಯಾಸಕರಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆಯ ಕುರಿತು ಸ್ಪಷ್ಟವಾದ ಸೌಲಭ್ಯ ಇರಲಿಲ್ಲ. ಈ ಕಾರಣದಿಂದ ಹಲವು ಮಹಿಳಾ ಉಪನ್ಯಾಸಕರು ಅನೇಕ ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಸರ್ಕಾರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇದರಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆ.
ಇದರ ಜೊತೆಗೆ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರೆಸಲಾಗುವುದಾಗಿ ತಿಳಿಸಿದ್ದಾರೆ. ಅಜೀಂ ಪ್ರೇಮ್‌ಜಿ ಫೌಂಡೇಷನ್ ವತಿಯಿಂದ 2025–26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬಾರದ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ‘ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ’ ಅಡಿಯಲ್ಲಿ ಆರ್ಥಿಕ ಸಹಾಯ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದರಿಂದಾಗಿ ಮಹಿಳೆಯರು ಉದ್ಯೋಗ ಮತ್ತು ಮನೆ ಎರಡನ್ನು ನಿಭಾಯಿಸುವುದಕ್ಕೆ ಸುಲಭವಾಗುತ್ತದೆ. ಬಾಣಂತಿ ಸಮಯದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.




















