ಬೆಳಗಾವಿ: ರಾಜ್ಯದಲ್ಲಿ ಈಗಂತು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಇರುವುದೇ ಬೆರಳೆಣಿಕೆಯಷ್ಟು. ಅವುಗಳನ್ನು ಮುಚ್ಚಬಹುದು ಎಂಬ ಮಾತಿದೆ. ಆದರೆ ಆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಬಂಗಾರಪ್ಪ, ನಮ್ಮ ರಕ್ತದಲ್ಲಿಯೇ ಕನಚನಡವಿದೆ. ಹಾಗಾಗಿ ಕನ್ನಡ ಮಾದ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದಿದ್ದಾರೆ. ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ. ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 2025 -26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭ ಮಾಡಲು ಕ್ರಮವಹಿಸಲಾಗುವುದು. ನಾವೂ ಬಜೆಟ್ ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ.
2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ಮೇರೆಗೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ಧಗೊಳಿಸುವ ಮೂಲಕ ಕೆಪಿಎಸ್ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮಧು ಬಂಗಾರಪ್ಪ ಸದನದಲ್ಲಿ ತಿಳಿಸಿದ್ದಾರೆ.










