ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆಯಾಗಿದೆ. ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ.
ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ಬಳಿಕ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಉತ್ತಮ ಎಂಬ ಅಭಿಪ್ರಾಯ ತಿಳಿಸಿದ್ದಾರೆ. ಸುನಿಲ್ ದತ್ ಯಾದವ್ ಅವರಿದ್ದ ಪೀಠವು ಆದೇಶ ಹೊರಡಿಸಿದೆ. ಈ ಕೇಸ್ ಗೆ ಸಂಬಂಧಿಸಿದಂತೆ 2021ರಲ್ಲಿಯೇ ಜಾಮೀನು ಪಡೆದಿದ್ದರು.
ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಾಯ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್ ಹೇಳಿದಂತೆ ವಿನಯ್ ಕುಲಕರ್ಣಿ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಬಿಜೆಪಿಯ ಯೋಗೇಶ್ ಗೌಡರನ್ನು 2016ರ ಜೂನ್ 15ರಂದು ಧಾರವಾಡದ ಸಪ್ತಪುರದ ಜಿಮ್‌ನಲ್ಲಿ ಹತ್ಯೆ ಮಾಡಲಾಗಿತ್ತು.
ಈ ಘಟನೆಯಲ್ಲಿ 21 ಆರೋಪಿಗಳು ಶಾಮೀಲಾಗಿದ್ದಾರೆ ಎಂಬ ಮಾಹಿತಿ ಇದೆ. ಆರಂಭದಲ್ಲಿ ಸ್ಥಳೀಯ ಪೊಲೀಸರು 6 ಮಂದಿಯನ್ನು ಆರೋಪಿಗಳಾಗಿ ಗುರುತಿಸಿದ್ದರು, ಆದರೆ ಯೋಗೇಶ್ ಗೌಡ ಕುಟುಂಬದ ಅರ್ಜಿಯ ಮೇರೆಗೆ ಬಿಜೆಪಿ ಸರ್ಕಾರದಿಂದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
















