ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿಗೆ ಭೇಟಿ ನೀಡಿ, ಕಾರ್ಯಕರ್ತೆಯರ ಮನವಿ ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪೋಷಕರಿಗೂ ಗುಡ್ ನ್ಯೂಸ್ ನೀಡಿದ್ದಾರೆ. ಜೂನ್ ತಿಂಗಳಿನಿಂದಾನೇ ಅಂಗನವಾಡಿಗಳಲ್ಲೂ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭವಾಗಲಿವೆ ಎಂದಿದ್ದಾರೆ.
ಮುಂದಿನ ಜೂನ್ ತಿಂಗಳಿನಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಜೊತೆಗೆ ಹಂತ ಹಂತವಾಗಿ ಅಂಗನವಾಡಿ ಕಾರ್ಯಜರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು. ನಾನು ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನ್ನಾಡಿ ಬಿಎಲ್ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈ ಬಿಡುವಂತೆ ಮಾಡಿದ್ದೆ. ಆದರೆ ಬಿಎಲ್ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದಿದ್ದಾರೆ.
ನಾನೊಬ್ಬ ಮಹಿಳೆಯಾಗಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ನಾನು ಸಚಿವೆಯಾದ ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸಿರುವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
















