ಚಿತ್ರದುರ್ಗ. ಮಾರ್ಚ್. 28: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಮತ್ತು ಲಿಂಗಾನುಪಾತವನ್ನು ಸುಧಾರಿಸಲು ಪಿಸಿಪಿಎನ್‍ಡಿಟಿ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲೆಯ ಲಿಂಗ ಅನುಪಾತದ ಏರಿಳಿತದ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷೆ ಡಾ.ಎಸ್.ಸೌಮ್ಯ ಮಾತನಾಡಿ, ಜಿಲ್ಲೆಯ ಪರಶುರಾಂಪುರ ಮತ್ತು ಮೊಳಕಾಲ್ಮೂರು ಭಾಗದ ಕೆಲವು ಗರ್ಭಿಣಿಯರು ಲಿಂಗ ಪತ್ತೆ ಪರೀಕ್ಷೆಗಾಗಿ ಪಕ್ಕದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಡಿ ಪ್ರದೇಶಗಳಿಗೆ ಹೋಗಿ, ಅಲ್ಲಿನ ಕೆಲವು ಅನಧಿಕೃತ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಂತಹ ಪ್ರಕರಣಗಳನ್ನು ಪತ್ತೆಹಚ್ಚಲು ವಿಶೇಷ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ವಿಶೇಷವಾಗಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಸಮಿತಿ ಸದಸ್ಯೆ ಕೆ.ಪಿ.ಮೀನಾಕ್ಷಿ, ಗರ್ಭಾವಸ್ಥೆಯ ಆರಂಭದಿಂದಲೇ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ವಹಿಸಬೇಕು. ಆಶಾ ಕಾರ್ಯಕರ್ತೆಯರು ಗರ್ಭಿಣಿಯರ ನೋಂದಣಿ ಹಾಗೂ ಅವರ ಚಲನವಲನದ ಮೇಲೆ ನಿರಂತರ ನಿಗಾ ಇಡಬೇಕು ಎಂದು ತಿಳಿಸಿದರು.
ಲಿಂಗ ಪತ್ತೆ ಹಚ್ಚುವ ಜಾಲದ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸದಸ್ಯೆ ಗಾಯತ್ರಿ ಶಿವರಾಂ ಅಭಿಪ್ರಾಯಪಟ್ಟರು.
ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪಿಸಿಪಿಎನ್ ಡಿಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಪ್ರಚುರ ಪಡಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿವೆಯೇ ಮತ್ತು ಅಗತ್ಯ ದಾಖಲೆಗಳನ್ನು ಸರಿಯಾಗಿ ನಿರ್ವಹಿಸುತ್ತಿವೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು. ಎಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್‍ಗಳು ನಡೆಯುತ್ತಿವೆಯೋ ಅಂತಹ ಕೇಂದ್ರಗಳನ್ನು ಪ್ರಮುಖವಾಗಿ ಗುರಿಯಾಗಿಸಿಕೊಂಡು ಅನಿರೀಕ್ಷಿತ ತಪಾಸಣೆ ನಡೆಸಬೇಕು ಎಂದು ಸಮಿತಿ ಸದಸ್ಯ ಉಮೇಶ್ ಸಲಹೆ ನೀಡಿದರು.
ರಾಜ್ಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾದ ವಿಶೇಷ ಸಾಫ್ಟ್‍ವೇರ್ ಮೂಲಕ ಕಳೆದ ಮೂರು ವರ್ಷಗಳ ದತ್ತಾಂಶವನ್ನು ವಿಶ್ಲೇಷಿಸಲಾಗುತ್ತಿದೆ. ಈ ತಂತ್ರಜ್ಞಾನವು ಅಕ್ರಮ ಸ್ಕ್ಯಾನಿಂಗ್ ನಡೆಯುವ ಸಾಧ್ಯತೆ ಇರುವ “ರೆಡ್ ಮಾರ್ಕ್” ಪ್ರದೇಶಗಳನ್ನು ಗುರುತಿಸಲಿದ್ದು, ಅಂತಹ ಕೇಂದ್ರಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಿಸಿಪಿಎನ್‍ಡಿಟಿ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಡಿ.ರೇಖಾ, ಸದಸ್ಯರಾದ ಡಾ.ಕೆ.ಜಿ.ಸತ್ಯನಾರಾಯಣ, ಕೆ.ಮೀನಾಕ್ಷಿ, ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಮಕ್ಕಳ ತಜ್ಞ ಡಾ.ದೇವರಾಜ್, ಸತ್ಯ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ನ ಡಾ.ಸತ್ಯನಾರಾಯಣ, ವಕೀಲ ಎಂ.ಉಮೇಶ್, ಸಮಾಜ ಕಾರ್ಯಕರ್ತೆ ಗಾಯತ್ರಿ ಶಿವರಾಂ ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.
















