ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.2026ರ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಗೆ ಮಾತ್ರ ಅನ್ವಯವಾಗುವಂತೆ, ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕೆಲಸದ ಸಮಯ ನಿಗದಿಪಡಿಸಿ ಮಾರ್ಚ್ 31ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ಕ್ರಮವನ್ನು ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತರಲಾಗಿದೆ.
ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಹೊಸ ಸಮಯ ಅನ್ವಯವಾಗಲಿದೆ. ಈ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ, ನೌಕರರು ಕರ್ತವ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ ಮಾನವೀಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರದ ಆದೇಶದ ಪ್ರಕಾರ, ಬದಲಾದ ಸಮಯದಲ್ಲೂ ಯಾವುದೇ ವ್ಯತ್ಯಯವಿಲ್ಲದೆ ಸರ್ಕಾರಿ ಸೇವೆಗಳು ಮುಂದುವರೆಯಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯ ಮೇರೆಗೆ ಸಮಯದ ಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.














