ಸುದ್ದಿಒನ್, ಬೆಂಗಳೂರು, ಏಪ್ರಿಲ್. 28 :
ರಾಜ್ಯದ ಶಾಲೆಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳಿಂದ ಅಶ್ಲೀಲ ಅಥವಾ ದ್ವಂದ್ವಾರ್ಥದ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿದೆ.

ಇತ್ತೀಚೆಗೆ ಕೆಲವು ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಅರ್ಥ ಹೊಂದಿರುವ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಶಿಕ್ಷಣದ ಪಾವಿತ್ರ್ಯವನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿಯೂ ಈ ನಿಯಮ ಅನ್ವಯವಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಡು ಮತ್ತು ನೃತ್ಯ ಆಯ್ಕೆ ಮಾಡುವ ಜವಾಬ್ದಾರಿ ಶಾಲಾ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯ ಮೇಲಿದೆ. ಮಕ್ಕಳಿಗೆ ಪ್ರೇರಣೆ ನೀಡುವ, ದೇಶಭಕ್ತಿ ಮೂಡಿಸುವ, ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಹಾಡುಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ.
ಇದರ ಜೊತೆಗೆ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸಭ್ಯ ಉಡುಗೆ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿ ಅಶ್ಲೀಲ ಕಾರ್ಯಕ್ರಮಗಳನ್ನು ಆಯೋಜಿಸಿದರೆ, ಸಂಬಂಧಿತ ಶಾಲಾ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.ಶಾಲೆ ಜ್ಞಾನ ಹಾಗೂ ವ್ಯಕ್ತಿತ್ವ ನಿರ್ಮಾಣದ ಕೇಂದ್ರವಾಗಿದ್ದು, ಅಶ್ಲೀಲ ಪ್ರದರ್ಶನಗಳು ಮಕ್ಕಳ ಮಾನಸಿಕ ಆರೋಗ್ಯ ಮತ್ತು ಶಿಸ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.



















