ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣ ಸುಟ್ಟು ಕರಕಲಾದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಸಮೀಪ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದು ದೊಡ್ಡ ದುರಂತವನ್ನು ತಪ್ಪಿಸಿದೆ.
ಸೋಮವಾರ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್, ಮಂಗಳವಾರ ಬೆಳಗಿನ ಜಾವ ದೇವರಗುಡ್ಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಬಸ್‌ನೊಳಗೆ ಆವರಿಸಿ, ಪ್ರಯಾಣಿಕರಲ್ಲಿ ಭೀತಿ ಉಂಟುಮಾಡಿತು.ತಕ್ಷಣ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ಚಾಲಕ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಯುವಂತೆ ಸೂಚಿಸಿದರು. ಪ್ರಯಾಣಿಕರು ಸುರಕ್ಷಿತವಾಗಿ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್‌ನಾದ್ಯಂತ ವ್ಯಾಪಿಸಿ ಭೀಕರವಾಗಿ ಉರಿಯತೊಡಗಿತು.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಅಸ್ಥಿಪಂಜರದಂತಾಗಿತ್ತು. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ತನಿಖೆಯಿಂದ ಹೊರಬರಬೇಕಿದೆ.ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆದ್ದಾರಿಯಲ್ಲಿ ಉಂಟಾದ ಸಂಚಾರ ದಟ್ಟಣೆಯನ್ನು ತೆರವುಗೊಳಿಸಿದರು.“ಚಾಲಕನ ತಾಳ್ಮೆ ಮತ್ತು ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ” ಎಂದು ಸ್ಥಳೀಯರು ಶ್ಲಾಘಿಸಿದ್ದಾರೆ.






