ಸುದ್ದಿಒನ್,ಬೆಂಗಳೂರು,ಮೇ.11 : ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಬಹುತೇಕ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ (Bilingual Education Policy) ಜಾರಿಗೊಳಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಭಾನುವಾರ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಜೀರುಂಡೆ ಪುಸ್ತಕ ಪ್ರಕಾಶನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಕಂಚ ಐಲಯ್ಯ ಅವರ ‘ಶೂದ್ರ ಬಂಡಾಯ’ ಕೃತಿಯ ಕನ್ನಡ ಅನುವಾದವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಈಗಾಗಲೇ ಶೇ. 50ಕ್ಕೂ ಹೆಚ್ಚು ಶಾಲೆಗಳಲ್ಲಿ ಈ ನೀತಿ ಜಾರಿಯಲ್ಲಿದ್ದು, ಮುಂದಿನ ವರ್ಷದಿಂದ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು.ದ್ವಿಭಾಷಾ ನೀತಿಯಡಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಭಾಷೆಯ ಕಲಿಕೆಗೂ ಸಮಾನ ಆದ್ಯತೆ ನೀಡಲಾಗುತ್ತದೆ. ಮಕ್ಕಳ ಶಿಕ್ಷಣದ ಮಾಧ್ಯಮವನ್ನು ಆಯ್ಕೆ ಮಾಡುವ ಹಕ್ಕು ಪೋಷಕರಿಗೆ ಇರಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಖಾಸಗಿ ಶಾಲೆಗಳಿಗೆ ಸರಿಸಮಾನವಾದ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲೇ ಪಡೆಯುವಂತಾಗಬೇಕು. ಸಮಾಜದಲ್ಲಿ ಸಮಾನತೆ ತರಲು ಮತ್ತು ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಶಿಕ್ಷಣವೇ ಪ್ರಬಲ ಅಸ್ತ್ರ. ಇಂಗ್ಲಿಷ್ ಮಾಧ್ಯಮ ಪರಿಚಯಿಸಿದಾಗ ಟೀಕೆಗಳು ವ್ಯಕ್ತವಾಗಿದ್ದವು, ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ದ್ವಿಭಾಷಾ ನೀತಿ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.


















