ಆಫ್ರಿಕಾ ಖಂಡದ ಕೆಲವು ರಾಷ್ಟ್ರಗಳಲ್ಲಿ ಎಬೊಲಾ ವೈರಸ್ ಸೋಂಕಿನ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ದೇಶಾದ್ಯಂತ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಿದೆ. ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಸಂಪೂರ್ಣ ಅಲರ್ಟ್ ಆಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಫ್ರಿಕಾ ಖಂಡದ ಕಾಂಗೋ ಹಾಗೂ ಉಗಾಂಡ ದೇಶಗಳಲ್ಲಿ ಎಬೊಲಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ರಾಜ್ಯದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಸದ್ಯದ ಮಟ್ಟಿಗೆ ಭಾರತದಲ್ಲಿ ಎಬೊಲಾ ವೈರಸ್‌ನ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಆದರೂ ಮುಂಜಾಗ್ರತಾ ಕ್ರಮವಾಗಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಅಂತರರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಬಿಗಿಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.
ಕೋವಿಡ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ರಾಜ್ಯ ಆರೋಗ್ಯ ಇಲಾಖೆಗೆ ಇದ್ದು, ಎಬೊಲಾ ತಡೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೊಸ ಸೂಚನೆಗಳು ಬಂದ ತಕ್ಷಣ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಆತಂಕದ ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯ ಸಿದ್ಧವಾಗಿದೆ” ಎಂದು ದಿನೇಶ್ ಗುಂಡೂರಾವ್ ಹೇಳಿದರು.
ವಿಶೇಷವಾಗಿ ಕಾಂಗೋ ಮತ್ತು ಉಗಾಂಡ ಸೇರಿದಂತೆ ಆಫ್ರಿಕಾ ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ, ಸ್ಕ್ರೀನಿಂಗ್ ಮತ್ತು ವೈದ್ಯಕೀಯ ಮೇಲ್ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಕೇಂದ್ರ ಸರ್ಕಾರದ ಸೂಚನೆ ನಿರೀಕ್ಷಿಸಲಾಗುತ್ತಿದೆ.ಎಬೊಲಾ ವೈರಸ್ ಅತಿ ಅಪಾಯಕಾರಿ ಸೋಂಕುಗಳಲ್ಲೊಂದು ಎಂದು ಪರಿಗಣಿಸಲಾಗಿದ್ದು, ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ಸಂಪರ್ಕದಿಂದ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಆತಂಕಕ್ಕೊಳಗಾಗದೆ, ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ತಜ್ಞರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















