ಸುದ್ದಿಒನ್,ಬೆಂಗಳೂರು,ಮೇ.23: ಶಾಲಾ-ಕಾಲೇಜುಗಳ ಆವರಣದಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇದೇ ವೇಳೆ ಕೇಸರಿ ಶಾಲು ಧರಿಸಿ ಬರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷಗಳಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಮತ್ತು ನೀಟ್ ಪರೀಕ್ಷೆ ಅಕ್ರಮಗಳ ಕುರಿತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ನಮ್ಮದು ಸಮಾನತೆಯ ರಾಜಕಾರಣ, ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹಿಜಾಬ್ ವಿಚಾರದಲ್ಲಿ ಬಿಜೆಪಿಯವರ ರಾಜಕೀಯ ನಿಲುವು ಏನೆಂಬುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ತರುವುದು ಮುಖ್ಯ. ಈ ಬಗ್ಗೆ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೇ ಸ್ಪಷ್ಟವಾಗಿ ಘೋಷಿಸಿದ್ದೆವು. ರಾಜ್ಯದ ಜನತೆ ನಮ್ಮನ್ನು ನಂಬಿ ಬಹುಮತ ನೀಡಿದ್ದಾರೆ. ನಾವು ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಮತದಾರರ ಋಣ ತೀರಿಸುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರದ ನಿಯಮಗಳನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಸವಾಲು ಹಾಕಿದ ಸಚಿವರು, ಮೊದಲು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ (KV) ಯಾವ ನಿಯಮಗಳಿವೆ ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಲಿ. ಧೈರ್ಯವಿದ್ದರೆ ಮೊದಲು ಅಲ್ಲಿನ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಕಳುಹಿಸಲಿ. ನಮ್ಮ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲಿಗೆ ಯಾವುದೇ ಅವಕಾಶವಿಲ್ಲ. ನಿಯಮ ಮೀರಿ ಯಾರಾದರೂ ಕೇಸರಿ ಶಾಲು ಧರಿಸಿ ಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗುಡುಗಿದರು.










