ರಾಜ್ಯಾದ್ಯಂತ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಿಗೆ ನೈರುತ್ಯ ಮುಂಗಾರು ವಿಸ್ತರಿಸಿದ್ದು, ರಾಜ್ಯದ ಹಲವೆಡೆ ಮಳೆಯ ಆರ್ಭಟ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಹಾಗೂ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿರುವುದರಿಂದ ಮಳೆಯ ತೀವ್ರತೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಮೇ 23ರಂದು ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಉತ್ತರ ಕರ್ನಾಟಕದ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಮೇ 25ರಂದು ಕೂಡ ಬೆಳಗಾವಿ, ವಿಜಯಪುರ ಹಾಗೂ ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 23ರಿಂದ 27ರವರೆಗೆ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗಲಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಮೇ 24 ಮತ್ತು 25ರಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಮೇ 26 ಮತ್ತು 27ರಂದು ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮೇ 28 ಮತ್ತು 29ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಕೊಳ್ಳುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.ಗುಡುಗು-ಮಿಂಚಿನ ಸಂದರ್ಭಗಳಲ್ಲಿ ಸಾರ್ವಜನಿಕರು ಮರಗಳ ಕೆಳಗೆ ನಿಲ್ಲಬಾರದು, ವಿದ್ಯುತ್ ಕಂಬಗಳಿಂದ ದೂರವಿರಬೇಕು ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















