Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಸಿಲಾಘಾತಕ್ಕೆ ನಲುಗಿದ ತೆಲಂಗಾಣ-ಆಂಧ್ರ : ಹೀಟ್ ಸ್ಟ್ರೋಕ್ ಗೆ 67 ಮಂದಿ ದುರ್ಮರಣ

---Advertisement---

ಸುದ್ದಿಒನ್,ಹೈದರಾಬಾದ್,ಮೇ.24: ಒಂದೆಡೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದ್ದರೆ, ಮತ್ತೊಂದೆಡೆ ನೆರೆರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸೂರ್ಯದೇವ ಪ್ರಚಂಡ ಪ್ರತಾಪ ತೋರುತ್ತಿದ್ದಾನೆ.

ಹೌದು,ರಣ ಬಿಸಿಲಿನ ತಾಪಕ್ಕೆ ಹಾಗೂ ಮೈಸುಡುವ ಸೆಖೆಗೆ ಜನರು ಅಕ್ಷರಶಃ ಕಂಗಾಲಾಗಿದ್ದು, ಉಷ್ಣಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರುತ್ತಿದೆ. ತೆಲಂಗಾಣದಲ್ಲಿ ಸದ್ಯ ಸೂರ್ಯನ ಶಾಖ ಜನರನ್ನು ಹೈರಾಣಾಗಿಸಿದ್ದು, ಬಿಸಿಗಾಳಿಯ ಹೊಡೆತಕ್ಕೆ ಸಿಲುಕಿ ಇದುವರೆಗೆ ಒಟ್ಟು 51 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ವಾರಂಗಲ್ನಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿದ್ದು, ಕರೀಂನಗರ, ಖಮ್ಮಂ, ಆದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳಲ್ಲೂ ಪರಿಸ್ಥಿತಿ ಗಂಭೀರವಾಗಿದೆ. ತೀವ್ರ ಬೇಸರದ ಸಂಗತಿಯೆಂದರೆ, ಮೃತರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ಕೂಡ ತೀವ್ರ ಬಿಸಿಲಿನ ತಾಪ ತಾಳಲಾರದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಸಿಲ ಬೇಗೆಗೆ ಜೀವ ಕಳೆದುಕೊಂಡ ಸಂತ್ರಸ್ತರ ಕುಟುಂಬಗಳಿಗೆ ತೆಲಂಗಾಣ ಸರ್ಕಾರ ಆಸರೆಯಾಗಿದ್ದು, ಮೃತರ ಕುಟುಂಬಸ್ಥರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಪ್ರಕಟಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸಚಿವರು, ಸಚಿವಾಲಯದಲ್ಲಿ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿ ಅತಿ ಹೆಚ್ಚು ತಾಪಮಾನವಿರುವ ಹಳ್ಳಿ ಮತ್ತು ತಾಲೂಕುಗಳನ್ನು ಗುರುತಿಸಿ ಜನರಲ್ಲಿ ಜಾಗೃತಿ ಮೂಡಿಸಲು ಆದೇಶಿಸಿದ್ದಾರೆ. ಬಸ್ ನಿಲ್ದಾಣ, ಮಾರುಕಟ್ಟೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು, ಮಜ್ಜಿಗೆ ಹಾಗೂ ಒಆರ್ಎಸ್ ಪ್ಯಾಕೆಟ್ಗಳನ್ನು ವಿತರಿಸಬೇಕು ಮತ್ತು ಗ್ರಾಮೀಣ ಮಟ್ಟದ ಅಧಿಕಾರಿಗಳು ಖುದ್ದಾಗಿ ಕಣಕ್ಕಿಳಿದು ಪರಿಸ್ಥಿತಿ ಅವಲೋಕಿಸಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಮೂಕಪ್ರಾಣಿ, ಪಕ್ಷಿಗಳಿಗೂ ನೀರಿನ ವ್ಯವಸ್ಥೆ ಮಾಡಲು ತಿಳಿಸಲಾಗಿದೆ.

ತೆಲಂಗಾಣದ ಸುಮಾರು 15 ಜಿಲ್ಲೆಗಳಲ್ಲಿ ಪಾದರಸ 45 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಅಂದರೆ 46.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜನರಿಗೆ ಮಹತ್ವದ ಎಚ್ಚರಿಕೆ ನೀಡಿದ್ದು, ಮಧ್ಯಾಹ್ನದ ವೇಳೆ ಅನಗತ್ಯವಾಗಿ ಸಾರ್ವಜನಿಕರು ಹೊರಗಡೆ ಅಡ್ಡಾಡಬಾರದು, ಕಡ್ಡಾಯವಾಗಿ ಸಾಕಷ್ಟು ನೀರು ಕುಡಿಯಬೇಕು ಮತ್ತು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ವೈದ್ಯಾಧಿಕಾರಿಗಳು ಕೋರಿದ್ದಾರೆ.

ಆಂಧ್ರಪ್ರದೇಶದಲ್ಲಿ 16 ಜನ ಸಾವು

ಆಂಧ್ರಪ್ರದೇಶದಲ್ಲೂ ಸೂರ್ಯನ ಬಿಸಿ ಜ್ವಾಲೆಗೆ ಒಂದೇ ದಿನದಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಎನ್ಟಿಆರ್, ಕೃಷ್ಣ ಮತ್ತು ಗುಂಟೂರು ಜಿಲ್ಲೆಗಳಲ್ಲೇ ಹೆಚ್ಚಿನ ಮಂದಿ ಮೃತಪಟ್ಟಿರುವುದು ಪರಿಸ್ಥಿತಿಯ ಗಂಭೀರತೆಗೆ ಕನ್ನಡಿ ಹಿಡಿದಿದೆ. ಬೇಸಿಗೆಯ ಈ ಕಠಿಣ ದಿನಗಳಲ್ಲಿ ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನಹರಿಸುವುದು ಇಂದಿನ ತುರ್ತು ಅಗತ್ಯವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now