ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸದಸ್ಯರಾಗುವಂತೆ ನೇರ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವಂತೆ ಹೈಕಮಾಂಡ್ ಪರೋಕ್ಷ ಸಂದೇಶ ನೀಡಿದೆ ಎಂಬ ರಾಜಕೀಯ ಚರ್ಚೆಗಳು ಜೋರಾಗಿವೆ.
ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಉಪಹಾರ ಕೂಟಕ್ಕೆ ಆಹ್ವಾನ ನೀಡಿದ್ದಾರೆ. ಈ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಸಿಎಂ ಯಾವ ಸಂದೇಶ ನೀಡಲಿದ್ದಾರೆ? ಮುಂದಿನ ರಾಜಕೀಯ ನಡೆ ಏನು? ಎಂಬ ಕುತೂಹಲ ತೀವ್ರವಾಗಿದೆ.
ಕಳೆದ ಆರು ತಿಂಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಗೊಂದಲಕ್ಕೆ ತೆರೆ ಎಳೆಯುವ ಉದ್ದೇಶದಿಂದ ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸುಮಾರು ಆರು ಗಂಟೆಗಳ ಕಾಲ ಸರಣಿ ಸಭೆಗಳು ನಡೆದಿವೆ ಎನ್ನಲಾಗಿದೆ. ಈ ವೇಳೆ “ಹಿಂದುಳಿದ ವರ್ಗಗಳ ನಾಯಕನಾಗಿ ನಿಮ್ಮ ಅಗತ್ಯ ರಾಷ್ಟ್ರ ರಾಜಕಾರಣಕ್ಕೆ ಇದೆ” ಎಂದು ಹೇಳಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಆದರೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರಂತೆ. ಆದರೂ ಮರುಚಿಂತನೆ ಮಾಡುವಂತೆ ಹೈಕಮಾಂಡ್ ಮನವಿ ಮಾಡಿದ್ದು, ಆಪ್ತರ ಜೊತೆ ಚರ್ಚಿಸಿ ಎರಡು-ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ತಿಳಿಸುವುದಾಗಿ ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

ರಾಜ್ಯಸಭೆ ಆಫರ್‌ನ್ನು ರಾಜಕೀಯ ವಲಯ ಮುಖ್ಯಮಂತ್ರಿ ಹುದ್ದೆ ತ್ಯಜಿಸುವ ಸೂಚನೆ ಎಂದೇ ವಿಶ್ಲೇಷಿಸುತ್ತಿದೆ. ಇದೇ ವೇಳೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಹೈಕಮಾಂಡ್ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ ಎನ್ನಲಾಗಿದೆ. ಆದರೆ ಡಿ.ಕೆ. ಶಿವಕುಮಾರ್ ಬಣ ಮಾತ್ರ ಅಧಿಕಾರ ಹಂಚಿಕೆ ಒಪ್ಪಂದ ಜಾರಿಗೆ ಬರುವ ಸೂಚನೆ ಇದು ಎಂದು ಅರ್ಥೈಸುತ್ತಿದೆ.ಸಭೆ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ದೇಹಭಾಷೆಯೇ ಸಂಪೂರ್ಣ ತೃಪ್ತಿ ವ್ಯಕ್ತಪಡಿಸದಂತಿತ್ತು ಎನ್ನಲಾಗುತ್ತಿದ್ದು, ಕಾಂಗ್ರೆಸ್ ಒಳರಾಜಕೀಯ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಇದೀಗ ಎಲ್ಲರ ಕಣ್ಣು ಗುರುವಾರದ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ನೆಟ್ಟಿದ್ದು, ಸಿದ್ದರಾಮಯ್ಯ ಯಾವ ತೀರ್ಮಾನ ಪ್ರಕಟಿಸುತ್ತಾರೆ ಎಂಬುದೇ ರಾಜ್ಯ ರಾಜಕೀಯದ ಹಾಟ್ ಟಾಪಿಕ್ ಆಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















