ಸುದ್ದಿಒನ್, ಬೆಂಗಳೂರು, ಮೇ.29: ಕರ್ನಾಟಕ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಗುರುವಾರ ಲೋಕಭವನಕ್ಕೆ ತೆರಳಿದ ಅವರು, ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.
ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರನ್ನುದ್ದೇಶಿಸಿ ಸುದೀರ್ಘ ಹಾಗೂ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ತಮಗೆ ಇಷ್ಟು ವರ್ಷಗಳ ಕಾಲ ಪ್ರೀತಿ ಮತ್ತು ಬೆಂಬಲ ನೀಡಿದ ನಾಡಿನ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
ಸಂವಿಧಾನದಿಂದ ನನ್ನ ಕನಸು ನನಸಾಗಿದೆ :

ತಮ್ಮ ರಾಜಕೀಯ ಯಾನವನ್ನು ಸ್ಮರಿಸಿದ ಅವರು, “ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು ಹಾಗೂ ಮಹಾತ್ಮ ಗಾಂಧಿಯವರೇ ನನ್ನ ಆದರ್ಶ,” ಎಂದು ಹೇಳಿದ್ದಾರೆ.
”ನನ್ನ 48 ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದು ಹೇಳಿದ್ದಾರೆ.
ಪಕ್ಷದ ವರಿಷ್ಠರು ಹಾಗೂ ಶಾಸಕರಿಗೆ ಕೃತಜ್ಞತೆ :
ತಮಗೆ ಜನಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ, ತಮ್ಮನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿದ ಶಾಸಕರಿಗೆ ಮತ್ತು ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ತಮ್ಮನ್ನು ಸದಾ ಬೆಂಬಲಿಸಿದ ಹೃದಯವಂತ ಕನ್ನಡಿಗರಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಹೇಳಿದ್ದಾರೆ.
ಹುದ್ದೆಗೆ ಮಾತ್ರ ರಾಜೀನಾಮೆ, ಸಕ್ರಿಯ ರಾಜಕಾರಣಕ್ಕಲ್ಲ!
ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ತಾವು ರಾಜಕಾರಣದಿಂದ ದೂರ ಸರಿಯುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.
ಜನರೇ ದೇವರು: “ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು,” ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.
ಹೋರಾಟ ಮುಂದುವರಿಯಲಿದೆ: “ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ,” ಎಂದು ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















