ಸುದ್ದಿಒನ್,ಬೆಂಗಳೂರು,ಮೇ.30: ಕರ್ನಾಟಕ ರಾಜಕೀಯದ ಬಹುದೊಡ್ಡ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯುವುದು ಈಗ ಸಂಪೂರ್ಣ ಅಧಿಕೃತಗೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂಬರುವ ಸೋಮವಾರ ಅಥವಾ ಬುಧವಾರದ ಅತ್ಯಂತ ಶುಭದಾಯಕ ಗೋಧೂಳಿ ಮುಹೂರ್ತದಲ್ಲಿ ಡಿಕೆಶಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ
ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕರ ನಿರ್ಣಾಯಕ ಸಭೆ ಕರೆಯಲಾಗಿದೆ. ಎಐಸಿಸಿ ವೀಕ್ಷಕರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ಜರುಗಲಿದೆ. ಯಾವುದೇ ಭಿನ್ನಾಭಿಪ್ರಾಯಗಳಿಗೆ ಆಸ್ಪದ ನೀಡದೆ, ಅತ್ಯಂತ ಸುಗಮವಾಗಿ ಒಮ್ಮತದ ನಾಯಕನನ್ನು ಆಯ್ಕೆ ಮಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ.
ಸಿದ್ದರಾಮಯ್ಯ ಅವರಿಂದಲೇ ಡಿಕೆಶಿ ಹೆಸರು ಪ್ರಸ್ತಾಪ!
ಈ ಸಭೆಯ ಅತ್ಯಂತ ರೋಚಕ ಬೆಳವಣಿಗೆ ಎಂದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಮುಂದಿನ ಶಾಸಕಾಂಗ ಪಕ್ಷದ ನಾಯಕರೆಂದು ಅಧಿಕೃತವಾಗಿ ಸೂಚಿಸಲಿದ್ದಾರೆ. ಇದಕ್ಕೆ ಪಕ್ಷದ ಹಿರಿಯ ಶಾಸಕರು ಬೆಂಬಲ ಸೂಚಿಸಲಿದ್ದು, ಕೇವಲ ಒಂದೇ ಸಾಲಿನ ನಿರ್ಣಯದ ಮೂಲಕ ಹೈಕಮಾಂಡ್ ತೀರ್ಮಾನಕ್ಕೆ ಒಪ್ಪಿಗೆ ಮುದ್ರೆ ಬೀಳಲಿದೆ.

ಈ ಸಭೆಯಲ್ಲಿ ಶಾಸಕರಿಗೆ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಇರುವುದಿಲ್ಲ. ಸಭೆ ಮುಗಿಯುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅವರು ನೇರವಾಗಿ ಲೋಕಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಹೊಸ ಸಿಎಂ ಅಧಿಕಾರ ವಹಿಸಿಕೊಳ್ಳುವವರೆಗೆ ಅವರು ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಐತಿಹಾಸಿಕ ಪ್ರಮಾಣ ವಚನ!
ತಮ್ಮ ರಾಜಕೀಯ ಜೀವನದ ಬಹುದೊಡ್ಡ ಕನಸಿನಂತೆ, ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಅದ್ಧೂರಿ ಸಮಾರಂಭಕ್ಕೆ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ದೇಶದ ಪ್ರಮುಖ ಮೈತ್ರಿಕೂಟದ ನಾಯಕರು ಸಾಕ್ಷಿಯಾಗಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















