ಸುದ್ದಿಒನ್,ಬೆಂಗಳೂರು,ಮೇ.31: ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಖಾಸಗಿ ನಿವಾಸದ ಬಳಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಅಧಿಕೃತ ಪ್ರೋಟೋಕಾಲ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಇಡೀ ಏರಿಯಾವನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ರಸ್ತೆಗಳನ್ನು ಬೆಂಗಳೂರು ನಗರ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟದ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಭದ್ರತಾ ಕಾರಣಗಳಿಂದಾಗಿ ನಿಯೋಜಿತ ಸಿಎಂ ಅವರ ಖಾಸಗಿ ಮನೆಗೆ ಸಾರ್ವಜನಿಕರು ಮತ್ತು ಪಕ್ಷದ ಸಾಮಾನ್ಯ ಕಾರ್ಯಕರ್ತರು ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದ್ದು, ಅಭಿಮಾನಿಗಳು ಹಾಗೂ ಜನಸಾಮಾನ್ಯರನ್ನು ಡಿ.ಕೆ. ಶಿವಕುಮಾರ್ ಅವರು ಇನ್ಮುಂದೆ ತಮ್ಮ ಸರ್ಕಾರಿ ನಿವಾಸದಲ್ಲಿ ಮಾತ್ರ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.










