ಸುದ್ದಿಒನ್,ಬೆಂಗಳೂರು,ಜೂನ್.02: ರಾಜ್ಯದ ಸರ್ಕಾರಿ ಶಾಲೆಗಳ ಆವರಣದಲ್ಲಿ ಮತ್ತು ಶಾಲಾ ಕೊಠಡಿಗಳ ಒಳಗೆ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಹಾಗೂ ದೂರದರ್ಶನ ಧಾರಾವಾಹಿಗಳ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇತ್ತೀಚಿನ ದಿನಗಳಲ್ಲಿ ಶಾಲಾ ಆವರಣಗಳನ್ನು ಚಿತ್ರೀಕರಣಕ್ಕಾಗಿ ಬಳಸಲು ಅನುಮತಿ ಕೋರಿ ನಿರ್ಮಾಪಕರು ಮತ್ತು ನಿರ್ದೇಶಕರಿಂದ ಸಲ್ಲಿಕೆಯಾಗುತ್ತಿದ್ದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಇಲಾಖೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಚಿತ್ರೀಕರಣಕ್ಕೆ ಅನುಮತಿ ನೀಡಲು ನಿರಾಕರಿಸಿದೆ.ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಈ ಕುರಿತು ರಾಜ್ಯದ ಎಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ರವಾನಿಸಿದ್ದಾರೆ.
ಶಾಲಾ ಅವಧಿಯಲ್ಲಿ ಚಿತ್ರೀಕರಣ ನಡೆಸುವುದರಿಂದ ವಿದ್ಯಾರ್ಥಿಗಳ ಗೌಪ್ಯತೆ ಹಾಗೂ ಸುರಕ್ಷತೆಗೆ ಧಕ್ಕೆಯುಂಟಾಗುವ ಸಂಭವ ಇರುತ್ತದೆ. ವಿದ್ಯಾರ್ಥಿಗಳ ರಕ್ಷಣೆ ಶಾಲಾ ಮುಖ್ಯಸ್ಥರ ಜವಾಬ್ದಾರಿಯಾಗಿರುತ್ತದೆ. ಕ್ಯಾಮೆರಾ, ಜನಸಂದಣಿ ಹಾಗೂ ಚಿತ್ರೀಕರಣದ ಗದ್ದಲದಿಂದ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ತೊಂದರೆಯಾಗಲಿದ್ದು, ಶೈಕ್ಷಣಿಕ ವಾತಾವರಣ ಹದಗೆಡುತ್ತದೆ. ಹಲವು ಪೋಷಕರು ತಮ್ಮ ಮಕ್ಕಳ ಚಿತ್ರಗಳನ್ನು ಅಥವಾ ಶಾಲಾ ವಾತಾವರಣದ ದೃಶ್ಯಗಳನ್ನು ಮಾಧ್ಯಮ ಹಾಗೂ ಸಿನಿಮಾಗಳಲ್ಲಿ ಪ್ರಕಟಿಸಲು ಒಪ್ಪಿಗೆ ನೀಡುವುದಿಲ್ಲ. ಚಿತ್ರೀಕರಣದ ಅಬ್ಬರ ಮತ್ತು ಸನ್ನಿವೇಶಗಳು ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಹಾಗೂ ಮಕ್ಕಳಲ್ಲಿ ಅನಗತ್ಯ ಒತ್ತಡವನ್ನು ಉಂಟುಮಾಡಬಹುದು.ಶಾಲೆಯ ಆಸ್ತಿ-ಪಾಸ್ತಿಗಳ ಭದ್ರತೆ ಹಾಗೂ ಶಾಲಾ ಶಿಸ್ತಿನ ನಿಯಮಗಳನ್ನು ಕಾಪಾಡುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯಂತೆ ಶೈಕ್ಷಣಿಕ ಅವಧಿ, ರಜಾ ದಿನಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಯಾವುದೇ ಆಸ್ಪದ ಇರುವುದಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಖಾಸಗಿ ಅಥವಾ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಶಾಲಾ ಮೈದಾನ ಹಾಗೂ ಆವರಣವನ್ನು ಬಳಸಲು ಈಗಾಗಲೇ ಅನುಮತಿ ನಿರಾಕರಿಸಲಾಗಿದ್ದು, ಅದರ ಮುಂದುವರಿದ ಭಾಗವಾಗಿ ಶಾಲೆಯ ಒಳಗೆ ಯಾವುದೇ ರೀತಿಯ ಚಿತ್ರೀಕರಣ ನಡೆಸಲು ಇಲಾಖೆ ಸಂಪೂರ್ಣವಾಗಿ ನಿರಾಕರಿಸಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















