ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾದ ನಿರ್ದಿಷ್ಟ ಅಳತೆಯ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ಸ್ವಾಧೀನಾನುಭವ / ಅಧಿಭೋಗ ಪ್ರಮಾಣ ಪತ್ರ (Occupancy Certificate – OC) ಪಡೆಯುವುದರಿಂದ ಒಂದು ಬಾರಿಗೆ ಅನ್ವಯವಾಗುವಂತೆ ವಿನಾಯಿತಿ ನೀಡಿ ಸರ್ಕಾರ ಹೊಸದಾಗಿ ಅಧಿಕೃತ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜೂನ್ 09, 2026 ರಂದು ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಮತ್ತು ವಿಳಂಬವಿಲ್ಲದೆ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಇರುವ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಇದು ಅನ್ವಯವಾಗುತ್ತದೆ.ನೆಲಮಹಡಿ + 3 ಅಂತಸ್ತುಗಳು (ಜಿ+3) ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ, ಸಂಪೂರ್ಣವಾಗಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಈ ವಿನಾಯಿತಿ ಸಿಗಲಿದೆ.ಈ ವಿನಾಯಿತಿಯ ಲಾಭ ಪಡೆಯಲು ಸಾರ್ವಜನಿಕರು 31-05-2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿರಬೇಕು.
ಅರ್ಹ ಕಟ್ಟಡಗಳು ಪೂರ್ಣಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳು (ESCOMS) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ. ಕಟ್ಟಡದ ಭಾವಚಿತ್ರವನ್ನು (Photo) ಪಡೆದು, ದಾಖಲಿಸಿಕೊಂಡ ನಂತರವಷ್ಟೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುತ್ತದೆ.
ಈ ಹಿಂದೆ ಡಿಸೆಂಬರ್ 2025 ಮತ್ತು ಮಾರ್ಚ್ 2026 ರಲ್ಲಿ ಹೊರಡಿಸಲಾಗಿದ್ದ ಆದೇಶಗಳಿಗೆ ಮುಂದುವರಿಕೆಯಾಗಿ, ಜೂನ್ 3, 2026 ರಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಈ ಪರಿಷ್ಕೃತ ಆದೇಶವನ್ನು ಹೊರಡಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಂ.ರಾಜ್) ಹಾಗೂ ಸರ್ಕಾರದ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ಮನೆ ಕಟ್ಟಿ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದ ಸಾವಿರಾರು ಜನರಿಗೆ ಕಚೇರಿಗಳಿಗೆ ಅಲೆಯುವ ತಾಪತ್ರಯ ತಪ್ಪಿದಂತಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












