ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳ ಬಂಧನಕ್ಕೆ ಇಂದಿಗೆ ಎರಡು ವರ್ಷಗಳು ಪೂರ್ಣಗೊಂಡಿವೆ. 2024ರ ಜೂನ್ 11ರಂದು ಮೈಸೂರಿನ ಹೋಟೆಲ್ ಒಂದರಲ್ಲಿ ಬಂಧಿತರಾಗಿದ್ದ ದರ್ಶನ್, ಮಧ್ಯಂತರ ಜಾಮೀನಿನ ಬಳಿಕ ಮತ್ತೆ ಜೈಲು ಸೇರಿದ್ದರು. ಬಳಿಕ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ಜೈಲು ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬಂದಿವೆ.
ಸುಪ್ರೀಂಕೋರ್ಟ್ ಆದೇಶದ ನಂತರ ಕನಿಷ್ಠ ಇನ್ನೂ ಒಂದು ವರ್ಷದವರೆಗೆ ಜಾಮೀನು ದೊರೆಯುವ ಸಾಧ್ಯತೆ ಕ್ಷೀಣವಾಗಿದೆ ಎಂಬ ವಾಸ್ತವವನ್ನು ಅರಿತಿರುವ ದರ್ಶನ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೌನ ಜೀವನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜೈಲಿನೊಳಗೆ ಇತರ ಕೈದಿಗಳೊಂದಿಗೆ ಹೆಚ್ಚು ಬೆರೆಯದೆ, ವಾರಕ್ಕೊಮ್ಮೆ ಜೈಲಾಡಳಿತ ನೀಡುವ ಪುಸ್ತಕಗಳನ್ನು ಓದುತ್ತಾ ಸಮಯ ಕಳೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜೈಲಿನಲ್ಲೇ ತಮ್ಮ ಆತ್ಮಚರಿತ್ರೆ ಬರೆಯಲು ಮುಂದಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರತಿದಿನ ಜೈಲಾಧಿಕಾರಿಗಳಿಂದ ಬಿಳಿ ಹಾಳೆ ಹಾಗೂ ಪೆನ್ಸಿಲ್ ಪಡೆದು ತಮ್ಮ ಜೀವನದ ಅನುಭವಗಳು, ವೈಯಕ್ತಿಕ ಘಟನೆಗಳು ಮತ್ತು ಬದುಕಿನ ಪಯಣವನ್ನು ದಾಖಲಿಸುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜೈಲಿನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಗಳಲ್ಲೂ ಭಾಗವಹಿಸದೆ, ಬರವಣಿಗೆಯಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ ಪ್ರಕರಣದ ಐವರು ಆರೋಪಿಗಳಿಗೆ ಮಹತ್ವದ ಕಾನೂನು ರಿಲೀಫ್ ದೊರೆತಿದೆ. ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಿನಯ್, ನಂದೀಶ್, ಧನರಾಜು, ಪವನ್ ಹಾಗೂ ರಾಘವೇಂದ್ರ ಅವರ ಜಾಮೀನನ್ನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.ಪ್ರಕರಣದ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಐವರು ಆರೋಪಿಗಳ ಜಾಮೀನನ್ನು ಮುಂದುವರಿಸಲು ಅನುಮತಿ ನೀಡಿದೆ. ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮತ್ತೊಂದು ಮಹತ್ವದ ಹಂತ ತಲುಪಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














