ಚಿತ್ರದುರ್ಗ: ಮಧ್ಯಕರ್ನಾಟಕದ ಬಯಲುಸೀಮೆ ಹಳೆ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿರುವುದಾಗಿ ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಧಾನಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪರಾಭವಗೊಂಡಿದ್ದೇನೆಂದು ಚಿತ್ರದುರ್ಗವನ್ನು ತೊರೆಯುವುದಿಲ್ಲ. ಇಲ್ಲಿಯೇ ಕಾರ್ಯಕರ್ತರು ಹಾಗೂ ಮುಖಂಡರುಗಳ ಜೊತೆ ಇದ್ದುಕೊಂಡು ಸಮಸ್ಯೆಗಳ ಕುರಿತು ಚರ್ಚಿಸಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಈ ಸಂಬಂಧ ಹಿಂದುಳಿದ ಚಿತ್ರದುರ್ಗ ಜಿಲ್ಲೆಗೆ ಮೆಡಿಕಲ್ ಕಾಲೇಜು, ತುಮಕೂರು, ಚಿತ್ರದುರ್ಗ, ದಾವಣಗೆರೆ ನೇರ ರೈಲು ಮಾರ್ಗ ಯೋಜನೆ, ಭದ್ರಾಮೇಲ್ದಂಡೆ ಯೋಜನೆ, ಬೆಳೆ ವಿಮೆ ಪಾವತಿಸಿರುವ ರೈತರಿಗೆ ಕಂಪನಿಗಳು ಬೆಳೆ ವಿಮೆ ಪಾವತಿಸದೆ ಸತಾಯಿಸುತ್ತಿರುವ ಬಗ್ಗೆಯೂ ಮುಖ್ಯಮಂತ್ರಿಗೆ ನೀಡಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ ಹೋಬಳಿ ಮಟ್ಟದಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ನಡೆಸಿ ಮಹತ್ವದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ತಿಳಿಸಿದರು.
ಧರ್ಮಪುರ, ಪರಶುರಾಂಪುರ, ಭರಮಸಾಗರ, ದಾವಣಗೆರೆಯ ಮಾಯಕೊಂಡ ಹೋಬಳಿಯನ್ನು ತಾಲ್ಲೂಕು ಕೇಂದ್ರಗಳನ್ನಾಗಿ ಘೋಷಿಸಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ ಸರ್ಕಾರಿ ಕಚೇರಿ ತೆರೆದು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ಹದಿಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಡಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ಎ.ಐ.ಸಿ.ಸಿ.ಯಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಗೊಂಡಿದ್ದು, ಎಲ್ಲಾ ಬೂತ್‌ಗಳಲ್ಲಿ ಡಿಜಿಟಲ್ ಮೂಲಕ ಸದಸ್ಯತ್ವ ಅಭಿಯಾನ ನೊಂದಣಿಯಾಗುತ್ತಿದೆ. ೭೫ ನೇ ಸ್ವಾತಂತ್ರ್ಯೋ ತ್ಸವ ವರ್ಷವಾಗಿರುವುದರಿಂದ ವಜ್ರ ಮಹೋತ್ಸವ ಸದಸ್ಯತ್ವ ನೊಂದಣಿ ವಿಶೇಷ ಕಾರ್ಯಕ್ರಮ ಇದಾಗಿರುವುದರಿಂದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ನೇಮಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯತ್ವ ನೊಂದಣಿಯಾಗಬೇಕೆಂದು ಮನವಿ ಮಾಡಿದರು.
ಕೆ.ಪಿ.ಸಿ.ಸಿ.ಕಾರ್ಯದರ್ಶಿ ಷಣ್ಮುಖಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಮೋಹನ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿದ್ದರು.