ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಮೂಲಕ ಈಶ್ವರಪ್ಪ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಗೊಂಡಂತಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಲ್ಲಿ ಇಂದು ಈ ಮಹತ್ವದ ವಿಚಾರಣೆ ನಡೆಯಿತು. ಈಶ್ವರಪ್ಪ ಅವರ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿ, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ವೆಂಕಟೇಶ್ ಅರಬಟ್ಟಿ ಅವರು, ಆರೋಪಿಯು ತನಿಖೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಿದರೆ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದರು. ಉಭಯ ಪಕ್ಷಗಳ ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ಪ್ರಕರಣದ ರದ್ದತಿ ಕೋರಿದ್ದ ಈಶ್ವರಪ್ಪ ಅವರ ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿತು.
ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಎಂಬುವವರು ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರಂಭದಲ್ಲಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಆದರೆ, ಈ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ದೂರುದಾರ ವಿನೋದ್ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು.





















