ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ನಿವಾಸದಿಂದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ತನಿಖೆ ಆರಂಭಿಸಿದ ಪೊಲೀಸರು, ಶುಕ್ರವಾರ ಮುಂಜಾನೆ ಕೆರೆಹಳ್ಳಿಯಲ್ಲಿರುವ ಪುನೀತ್ ಅವರ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬಂಧನದ ವೇಳೆ ಮಾತನಾಡಿದ ಪುನೀತ್ ಕೆರೆಹಳ್ಳಿ, ತಮ್ಮ ವಿರುದ್ಧದ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಬ್ದುಲ್ ರಜಾಕ್ ವಿರುದ್ಧ ತಾವು ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ, ತಮ್ಮನ್ನೇ ಬಂಧಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ತಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದು, ಜೀವ ಬೆದರಿಕೆಯೂ ಇದೆ ಎಂದು ಆರೋಪಿಸಿದರು.
ಪೊಲೀಸರು ಪುನೀತ್ ಅವರನ್ನು ಕರೆದೊಯ್ಯುವ ವೇಳೆ ಅವರ ತಾಯಿ ಭಾವುಕರಾಗಿ ಕಣ್ಣೀರಿಟ್ಟರು. ಮಗನನ್ನು ಬಿಡುವಂತೆ ಪೊಲೀಸರನ್ನು ಮನವಿ ಮಾಡಿದರು. ಈ ಘಟನೆಯ ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಆರೋಪಗಳಿಗೆ ಸಂಬಂಧಿಸಿದ ಸತ್ಯಾಸತ್ಯತೆ ತನಿಖೆ ಹಾಗೂ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ನಿರ್ಧಾರವಾಗಬೇಕಿದೆ.


















