ಬೆಂಗಳೂರು.ಜುಲೈ.07: ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೇಂದ್ರ ಹವಾಮಾನ ಇಲಾಖೆಯು ರಾಜ್ಯದ ವಿವಿಧ ಭಾಗಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆದರೆ, ಈ ಬಿರುಸಿನ ಮಳೆಯು ಎರಡು-ಮೂರು ದಿನಗಳ ನಂತರ ಕೊಂಚ ನಿಧಾನವಾಗಬಹುದು ಎಂದು ಅಂದಾಜಿಸಲಾಗಿದೆ.
ಜುಲೈ 7 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನು ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಧಾರವಾಡ, ಗದಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಇಲ್ಲಿ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ.
ಉಳಿದಂತೆ ಯಾದಗಿರಿ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಕೋಲಾರ ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, ಈ ಪ್ರದೇಶಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಜುಲೈ 8 ರಂದೂ ಸಹ ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಉತ್ತರ ಕನ್ನಡ ಹಾಗೂ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

















