ಬೆಂಗಳೂರು.ಜುಲೈ.07: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಎಂದು ಸುರಿಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಆರು ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಮೂಡಿಗೆರೆ, ಕೊಪ್ಪ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಕೇವಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇರಲಿದೆ. ಇತ್ತ ಶೃಂಗೇರಿ ತಾಲೂಕಿನಲ್ಲಿ ಮಳೆಯ ಆರ್ಭಟ ಮಿತಿಮೀರಿರುವುದರಿಂದ ಶಾಲೆಗಳ ಜೊತೆಗೆ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಕಳಸ ತಾಲೂಕಿನಲ್ಲಿ ಅಂಗನವಾಡಿ ಹಾಗೂ 1 ರಿಂದ 7ನೇ ತರಗತಿಯವರೆಗಿನ ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಸೀಮಿತಗೊಳಿಸಲಾಗಿದೆ. ಇನ್ನು ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು ಮತ್ತು ಆವತಿ ಹೋಬಳಿಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಮಲೆನಾಡು ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಪ್ರಮುಖ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇರಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಭಾಗವನ್ನು ಒಳಗೊಂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯನ್ನು ಮನಗಂಡು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ತಹಶೀಲ್ದಾರ್ ಸುಪ್ರಿತಾ ಅವರು ಆದೇಶ ಹೊರಡಿಸಿದ್ದಾರೆ.
ಇತ್ತ ಕುಂದಾನಗರಿ ಬೆಳಗಾವಿಯಲ್ಲೂ ವರುಣನ ಅಬ್ಬರ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಪ್ರದೇಶ ಹಾಗೂ ಖಾನಾಪುರ ತಾಲೂಕಿನಾದ್ಯಂತ ಇರುವ ಎಲ್ಲಾ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.

















