ಚಿತ್ರದುರ್ಗ.ಜುಲೈ.08 : ಇಂದು ಚಿತ್ರದುರ್ಗ ಜಿಲ್ಲೆಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಂಡ ಜಿಲ್ಲೆಯ ಇಬ್ಬರು ಉನ್ನತ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಏಕಕಾಲದಲ್ಲಿ ದಾಳಿ ನಡೆಸಿದೆ. ಹಿರಿಯೂರು ತಾಲೂಕಿನ ಬಬ್ಬರೂ ಗ್ರಾಮದಲ್ಲಿರುವ ಬಬ್ಬೂರು ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ಮನೆ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ಅವರ ನೇತೃತ್ವದ ತಂಡಗಳು ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.









