ಚಿತ್ರದುರ್ಗ, ಜುಲೈ. 12 : ಅಗಲಿದ ಮಾಜಿ ಸಂಸದ ಹಾಗೂ ನೀರಾವರಿ ಹೋರಾಟ ಸಮಿತಿ ಮೊದಲ ಅಧ್ಯಕ್ಷ ಹೆಚ್.ಹನುಮಂತಪ್ಪ ಅವರ ನಿಧನಕ್ಕೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀರ್ವ ಸಂತಾಪ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಕಟ್ಟಾ ಅನುಯಾಯಿಯಾಗಿದ್ದ ಹನುಮಮಂತಪ್ಪ ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಜಿಲ್ಲೆಯಲ್ಲಿ ಆರಂಭಗೊಂಡ ಹೋರಾಟದ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಯೋಜನೆ ಜಾರಿಗಾಗಿ ರಾಜ್ಯಮಟ್ಟದ ಪ್ರಯತ್ನ ನಡೆಸಿದ್ದರು.
ಅವರ ಅಗಲಿಕೆ ನೋವು ತಂದಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಉಪಾಧ್ಯಕ್ಷರುಗಳಾದ ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್ ಬಾಬು, ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಸುರೇಶ್ ಬಾಬು ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಗಲಿದ ಹನುಮಂತಪ್ಪ ಅವರ ಪಾರ್ಥಿವ ಶರೀರವ ಸಾರ್ವಜನಿಕ ದರ್ಶನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಇರಿಸಲಾಗುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತಿಳಿಸಿದೆ.



