ಸುದ್ದಿಒನ್ ಚಿತ್ರದುರ್ಗ.ಜುಲೈ.13 : ಮಾಜಿ ರಾಜ್ಯಸಭಾ ಸದಸ್ಯ ಎಚ್. ಹನುಮಂತಪ್ಪ ಅವರ ನಿಧನಕ್ಕೆ ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂತಿಮ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಂತಪ್ಪ ಅವರೊಂದಿಗಿನ ತಮ್ಮ ಸುದೀರ್ಘ ರಾಜಕೀಯ ಒಡನಾಟ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡರು.
1979ರಿಂದಲೂ ಹನುಮಂತಪ್ಪ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾಗಿ ತಿಳಿಸಿದ ಸಿಎಂ, ಅವರು ರೈಲ್ವೇ ಕಮಿಷನ್ ಅಧ್ಯಕ್ಷರಾಗಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಸಲ್ಲಿಸಿದ ಸೇವೆ ಸ್ಮರಣೀಯ ಎಂದರು. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೂ ಹನುಮಂತಪ್ಪ ಅವರು ವಿವಿಧ ಹಂತಗಳಲ್ಲಿ ಮಾರ್ಗದರ್ಶನ ನೀಡಿದ್ದರು. ಸಂಸತ್ತಿನಲ್ಲಿ ಮೂರು ಬಾರಿ ಸದಸ್ಯರಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು.
ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ನೀರಾವರಿ ಮತ್ತು ಕೃಷಿ ಯೋಜನೆಗಳ ಜಾರಿಗೆ ಅವರು ನಿರಂತರ ಹೋರಾಟ ನಡೆಸಿದ್ದರು. ಜಿಲ್ಲೆಯ ಹಿತದೃಷ್ಟಿಯಿಂದ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಅದ್ಭುತ ಗುಣ ಅವರದ್ದಾಗಿತ್ತು. ಅತ್ಯಂತ ಸರಳ ಜೀವನ ನಡೆಸಿದ ಹನುಮಂತಪ್ಪ ಅವರು ಪಾಟೀಲ್ ಹಾಗೂ ನಿಜಲಿಂಗಪ್ಪ ಅವರ ತತ್ವಗಳನ್ನು ಪಾಲಿಸುತ್ತಿದ್ದರು. ಚಿತ್ರದುರ್ಗದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮೊದಲ ಹೆಜ್ಜೆ ಇಟ್ಟವರೇ ಅವರು ಎಂದು ಸಿಎಂ ನೆನೆದರು.
ಅವರ ಭೌತಿಕ ದೇಹ ಇಂದು ನಮ್ಮೊಂದಿಗಿಲ್ಲದಿದ್ದರೂ, ಅವರ ತತ್ವ, ಆದರ್ಶ ಮತ್ತು ಆಚಾರ-ವಿಚಾರಗಳು ಸದಾ ಜೀವಂತವಾಗಿರುತ್ತವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ತಲೆದೋರಿರುವ ಬರಗಾಲದ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶೀಘ್ರದಲ್ಲೇ ಡಿವಿಷನ್ ಮಟ್ಟದ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








