ಬೆಂಗಳೂರು.ಜುಲೈ.18: ರಾಜ್ಯದಲ್ಲಿ ತಲೆದೋರಿರುವ ಮಳೆ ಕೊರತೆಯ ಹಿನ್ನೆಲೆಯಲ್ಲಿ, ರೈತರು ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಲಾಶಯಗಳಿಂದ ಸದ್ಯ ಬಿಡಲಾಗಿರುವ ನೀರು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸ್ಪಷ್ಟಪಡಿಸಿದರು. ಮಂಡ್ಯ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ರೈತರಾಗಿದ್ದರೂ, ಹರಿದುಬರುತ್ತಿರುವ ನೀರನ್ನು ಕೃಷಿ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂದು ಅವರು ಸೂಚಿಸಿದ್ದಾರೆ.
ಜಲಾಶಯಗಳಲ್ಲಿನ ನೀರಿನ ಸಂಗ್ರಹದ ನೈಜ ಸ್ಥಿತಿಯನ್ನು ನೋಡಿಕೊಂಡು ಮುಂದಿನ ಕೃಷಿ ಚಟುವಟಿಕೆಗಳ ಬಗ್ಗೆ ತೀರ್ಮಾನಿಸಬೇಕಾಗುತ್ತದೆ. ಆದ್ದರಿಂದ, ಈಗಲೇ ಬಿತ್ತನೆ ಹಾಗೂ ನಾಟಿ ಕಾರ್ಯಗಳನ್ನು ಕೈಗೊಂಡು, ಬಳಿಕ ತಮಗೆ ನೀರು ಬಿಡುವಂತೆ ಸರ್ಕಾರಕ್ಕೆ ಒತ್ತಡ ಹೇರಬಾರದು ಎಂದು ಮುಖ್ಯಮಂತ್ರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ರೈತರು ಸಹಕರಿಸಬೇಕು ಎಂದು ಸಿಎಂ ಕೋರಿದ್ದಾರೆ.
ನಾಳೆ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತುರ್ತು ಸಚಿವ ಸಂಪುಟ ಸಭೆ
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಭಾನುವಾರ ಸಾಮಾನ್ಯವಾಗಿ ರಜಾ ದಿನವಾಗಿದ್ದರೂ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.
ವಾಸ್ತವವಾಗಿ ಕಳೆದ ಗುರುವಾರವೇ ಕ್ಯಾಬಿನೆಟ್ ಸಭೆ ನಡೆಯಬೇಕಿತ್ತು. ಆದರೆ ಪೂರ್ವನಿರ್ಧರಿತ ದೆಹಲಿ ಪ್ರವಾಸದ ಕಾರಣದಿಂದಾಗಿ ಅದನ್ನು ನಡೆಸಲು ಸಾಧ್ಯವಾಗಿರಲಿಲ್ಲ. ರಾಜ್ಯದ ಪ್ರಸಕ್ತ ಬರ ಪರಿಸ್ಥಿತಿಯ ಕುರಿತು ತಕ್ಷಣವೇ ಸುದೀರ್ಘ ಚರ್ಚೆ ನಡೆಸಬೇಕಾದ ಅನಿವಾರ್ಯತೆ ಇರುವುದರಿಂದ, ರಜಾ ದಿನವನ್ನೂ ಲೆಕ್ಕಿಸದೆ ನಾಳೆನೇ ತುರ್ತು ಸಭೆ ಆಯೋಜಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಕೇವಲ ಸಚಿವ ಸಂಪುಟ ಸಭೆಯಷ್ಟೇ ಅಲ್ಲದೆ, ನಾಳೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (DCs) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CEOs) ಜೊತೆಯೂ ಮುಖ್ಯಮಂತ್ರಿಗಳು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ತೀವ್ರವಾಗಿ ಕಾಡುತ್ತಿರುವ ಬರಗಾಲದ ತೀವ್ರತೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









