ಬೆಂಗಳೂರು.ಜುಲೈ.18: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಕಾಲೇಜುಗಳ ಕರ್ತವ್ಯದ ಅವಧಿಯಲ್ಲಿ ಇಲಾಖೆಯ ಪೂರ್ವಾನುಮತಿ ಇಲ್ಲದೆ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಸಭೆ, ಸಮಾರಂಭ ಹಾಗೂ ಕಾರ್ಯಾಗಾರಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಇಲಾಖೆಯ ಕೆಲವು ಅಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ನಿರ್ದೇಶಕರ ಪೂರ್ವಾನುಮತಿ ಇಲ್ಲದೆ ಕಾಲೇಜು ಕೆಲಸದ ಅವಧಿಯಲ್ಲಿ ವಿವಿಧ ಸಂಘಟನೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದಾಗಿ ಕಾಲೇಜುಗಳ ಸುಗಮ ಆಡಳಿತ ವ್ಯವಸ್ಥೆ, ಶೈಕ್ಷಣಿಕ ಚಟುವಟಿಕೆಗಳು ಮತ್ತು ವಿದ್ಯಾರ್ಥಿಗಳ ಬೋಧನಾ ಪ್ರಕ್ರಿಯೆಗೆ ತೀವ್ರ ವ್ಯತ್ಯಯ ಉಂಟಾಗುತ್ತಿರುವುದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರ ಅನ್ವಯ ಪ್ರತಿಯೊಬ್ಬ ಸರ್ಕಾರಿ ನೌಕರನು ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ನೀತಿ ನಿಷ್ಠೆ, ಕರ್ತವ್ಯ ಶ್ರದ್ಧೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಸರ್ಕಾರದ ಸೇವೆಗೆ ಹಾಗೂ ಇಲಾಖೆಯ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಸಿಬ್ಬಂದಿಯ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಲಾಖೆಯ ನಿರ್ದೇಶಕರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಕಾಲೇಜಿನ ಕರ್ತವ್ಯದ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಪೂರ್ವಾನುಮತಿ ಇಲ್ಲದೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಭಾಗವಹಿಸುವ ಅನಿವಾರ್ಯತೆ ಇದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಸಮರ್ಥ ಕಾರಣಗಳೊಂದಿಗೆ ಕಡ್ಡಾಯವಾಗಿ ಮುಂಚಿತವಾಗಿಯೇ ಅನುಮತಿಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗದಂತೆ ಮತ್ತು ಉಪನ್ಯಾಸಕರ ಬೋಧನಾ ಕಾರ್ಯಗಳಿಗೆ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕು ಎಂದು ಆದೇಶಿಸಲಾಗಿದೆ.
ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕರ್ನಾಟಕ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ಅನ್ವಯ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.


ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









