ಸುದ್ದಿಒನ್, ಚಿತ್ರದುರ್ಗ.ಜುಲೈ.20: ದೇಶದಲ್ಲಿ ನೂರಾರು ಅಕ್ರಮಗಳನ್ನು ನಡೆಸಿರುವ, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಹಾಗೂ ನೀಟ್ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸಿರುವ ಕೇಂದ್ರ ಸರ್ಕಾರವನ್ನು ತಕ್ಷಣವೇ ವಜಾ ಮಾಡಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಜಿ ಕಾರ್ಯಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಸಿ. ಶಿವು ಯಾದವ್ ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪಾರದರ್ಶಕತೆಯ ಕೊರತೆ ಹಾಗೂ ನ್ಯಾಯಯುತ ತನಿಖೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ದಮನಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿರುವುದು, ಅಶ್ರುವಾಯು ಪ್ರಯೋಗಿಸಿರುವುದು, ಮೊಬೈಲ್ ಜಾಮರ್ ಅಳವಡಿಸಿರುವುದು, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಹಾಗೂ ದೆಹಲಿಯ ಹಲವು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿ ಪ್ರತಿಭಟನಾಕಾರರ ಸಂಚಾರಕ್ಕೆ ಅಡ್ಡಿಪಡಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮಗಳಾಗಿವೆ. ಅಲ್ಲದೆ, ಅಮರಣಾಂತ ಉಪವಾಸ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಪರಿಸರ ಹೋರಾಟಗಾರ ಹಾಗೂ ಶಿಕ್ಷಣತಜ್ಞ ಸೋನಂ ವಾಂಗ್ಚುಕ್ ಅವರಂತಹ ಶಾಂತಿಯುತ ಹೋರಾಟಗಾರರ ವಿರುದ್ಧವೂ ದಮನಕಾರಿ ಕ್ರಮಗಳನ್ನು ಅನುಸರಿಸಿರುವುದು ಕೇಂದ್ರ ಸರ್ಕಾರದ ಅಸಹಿಷ್ಣು ಮನೋಭಾವವನ್ನು ತೋರಿಸುತ್ತದೆ. ಭಿನ್ನಾಭಿಪ್ರಾಯವನ್ನು ಸಂವಾದದ ಮೂಲಕ ಪರಿಹರಿಸುವ ಬದಲು ಬಲಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಆಲಿಸಿ, ಅವರ ಭವಿಷ್ಯವನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಭಾರತದ ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ಈ ಘಟನೆಗಳ ಕುರಿತು ಸಮಗ್ರ ವರದಿ ಪಡೆದು, ಸಂವಿಧಾನದ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದಡಿಯಲ್ಲಿ ನಡೆಯುತ್ತಿರುವ ಯಾವುದೇ ಹೋರಾಟಗಳನ್ನು ಗೌರವಿಸದೆ ಇರುವುದು ದುರಾದೃಷ್ಟಕರ ಬೆಳವಣಿಗೆಯಾಗಿದೆ. ಈ ಹಿಂದೆ ಲಕ್ಷಾಂತರ ಜನರು ಮತ್ತು ರೈತರು ನಡೆಸಿದ ಹೋರಾಟವನ್ನು ಪೊಲೀಸ್, ಲಾಠಿ ಹಾಗೂ ಬಂದೂಕಿನಿಂದ ಹತ್ತಿಕ್ಕಿದ್ದು ಜನರ ಮನಸ್ಸಿನಲ್ಲಿ ಇನ್ನೂ ಹಸಿಯಾಗಿ ಉಳಿದಿದೆ. ಇಂತಹ ಸಂದರ್ಭದಲ್ಲಿ ಜಂತರ್ ಮಂತರ್ನಲ್ಲಿ ದೇಶದ ಯುವಶಕ್ತಿ ನಡೆಸುತ್ತಿರುವ ಹೋರಾಟವನ್ನು ದಾರಿ ತಪ್ಪಿಸುತ್ತಿರುವುದು, ಹೋರಾಟಗಾರರ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿರುತ್ತದೆ. ಕೇಂದ್ರ ಸರ್ಕಾರವು ಜನವಿರೋಧಿ ಸರ್ಕಾರವಾಗಿದ್ದು, ಆಡಳಿತವನ್ನು ನಡೆಸುವುದಕ್ಕೆ ಎಲ್ಲಾ ರಂಗದಲ್ಲಿಯೂ ವಿಫಲವಾಗಿದೆ. ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವುದರಿಂದ ಮಹಾಮಹಿಮ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಈ ಕೂಡಲೇ ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಣೆ ಮಾಡಬೇಕು. ಜೊತೆಗೆ ಧರ್ಮೇಂದ್ರ ಪ್ರಧಾನ್ರವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷರಾದ ಸಿ. ಶಿವು ಯಾದವ್ ಒತ್ತಾಯಿಸಿದ್ದಾರೆ.









