ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಕಳೆದ ಕೆಲವು ದಿನಗಳಿಂದ ನಡೆದ ಬೆಳವಣಿಗೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಕಳೆದ ಹತ್ತು ದಿನಗಳ ಬೆಳವಣಿಗೆಗಳು ತಮ್ಮ ಮನಸ್ಸಿಗೆ ತೀವ್ರ ನೋವುಂಟು ಮಾಡಿವೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ, ಕಳೆದ ನಾಲ್ಕು ದಶಕಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸುಧಾರಣೆಗೆ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದಾಗಿ ಪ್ರಧಾನ್ ಉಲ್ಲೇಖಿಸಿದ್ದಾರೆ. ದೇಶದ ಯುವಜನತೆಯ ಕನಸುಗಳು, ಆಶೋತ್ತರಗಳು ಮತ್ತು ನ್ಯಾಯಸಮ್ಮತ ನಿರೀಕ್ಷೆಗಳನ್ನು ಗೌರವಿಸುವುದು ತಮ್ಮ ಜೀವನದ ಧ್ಯೇಯವಾಗಿದ್ದು, ಅದಕ್ಕಾಗಿ ಸದಾ ಶ್ರಮಿಸಿರುವುದಾಗಿ ಹೇಳಿದ್ದಾರೆ.
2026ರ ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದ ಬಳಿಕ ಕೇಂದ್ರ ಸರ್ಕಾರ ತಕ್ಷಣವೇ ತನಿಖೆಯನ್ನು ಸಿಬಿಐಗೆ ವಹಿಸಿತು. ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಮುಂದಿನ ವರ್ಷದಿಂದ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಸುಮಾರು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ ಮರುಪರೀಕ್ಷೆಯನ್ನು ರಾಜ್ಯ ಸರ್ಕಾರಗಳು, ಜಿಲ್ಲಾಡಳಿತಗಳು ಹಾಗೂ ಪೋಷಕರ ಸಹಕಾರದಿಂದ ಯಶಸ್ವಿಯಾಗಿ ನಡೆಸಲಾಯಿತು ಎಂದು ಪ್ರಧಾನ್ ಹೇಳಿದ್ದಾರೆ.

ಈ ಸಂಪೂರ್ಣ ಪ್ರಕ್ರಿಯೆಯಲ್ಲಿ ಯಾವುದೇ ಪ್ರತಿಭಾವಂತ ವಿದ್ಯಾರ್ಥಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ತಾವು ಮೊದಲ ದಿನದಿಂದಲೇ ಸಂಪೂರ್ಣ ಹೊಣೆಗಾರಿಕೆ ವಹಿಸಿಕೊಂಡಿದ್ದಾಗಿ ತಿಳಿಸಿದ್ದಾರೆ.ಜುಲೈ 16ರಂದು ಪ್ರಕಟವಾದ ನೀಟ್-ಯುಜಿ ಫಲಿತಾಂಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದರೂ, ಕೆಲವರು ವಿದ್ಯಾರ್ಥಿಗಳನ್ನು ದಾರಿತಪ್ಪಿಸಲು ಮತ್ತು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸಿದ್ದು ತಮ್ಮನ್ನು ಬೇಸರಗೊಳಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದೇಶದ ಯುವಜನರ ಭವಿಷ್ಯ ಯಾವುದೇ ಕಾನೂನು ಸಂಕೀರ್ಣತೆಯಲ್ಲಿ ಸಿಲುಕಬಾರದು ಹಾಗೂ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಪರಿಸ್ಥಿತಿಯ ಲಾಭವನ್ನು ದೇಶ ವಿರೋಧಿ ಶಕ್ತಿಗಳು ಪಡೆಯದಂತೆ ತಡೆಯುವ ಉದ್ದೇಶದಿಂದಲೇ ತಾವು ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ಸಚಿವ ಸ್ಥಾನದಿಂದ ನಿರ್ಗಮಿಸಿದರೂ ರಾಷ್ಟ್ರಸೇವೆ, ಭಾರತ ಮಾತೆಯ ಸೇವೆ ಮತ್ತು ದೇಶದ ಯುವಜನರ ಆಶೋತ್ತರಗಳನ್ನು ಈಡೇರಿಸಲು ತಮ್ಮ ಕೆಲಸವನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ. ಜಗನ್ನಾಥನ ಆಶೀರ್ವಾದದೊಂದಿಗೆ ಮುಂದೆಯೂ ದೇಶದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










