ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದಿದ್ದರೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳು ತಲುಪದಿರುವುದು ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಹಿಡಿದ ಕನ್ನಡಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್ಓ ತೀವ್ರವಾಗಿ ಖಂಡಿಸಿವೆ.
ಈ ಶೈಕ್ಷಣಿಕ ವರ್ಷದಿಂದ ಶಾಲೆಗಳಿಗೆ ಪೂರೈಕೆಯಾಗಬೇಕಿದ್ದ ಉಚಿತ ಶೂ ಹಾಗೂ ಸಾಕ್ಸ್ ಸೌಲಭ್ಯ ವಿದ್ಯಾರ್ಥಿಗಳಿಗೆ ಇಂದಿಗೂ ತಲುಪಿಲ್ಲ. ಜೊತೆಗೆ ಸರ್ಕಾರವೇ ಉಚಿತವಾಗಿ ನೋಟ್ಬುಕ್ಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದರೂ, ಅವು ಶಾಲೆಗಳ ಮೆಟ್ಟಿಲು ಹತ್ತಿಲ್ಲ. ಇನ್ನು ವಿದ್ಯಾರ್ಥಿಗಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಸರ್ಕಾರ ನೀಡುತ್ತಿರುವ ಹಣ ಮಾರುಕಟ್ಟೆ ದರಕ್ಕಿಂತ ಕಡಿಮೆ ಇರುವುದರಿಂದ ಶಿಕ್ಷಕರೇ ತಮ್ಮ ಜೇಬಿನಿಂದ ಹೆಚ್ಚುವರಿ ಹಣವನ್ನು ಭರಿಸುವ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ.
ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಶಿಕ್ಷಣ ಮಂತ್ರಿಗಳೇ ನಮ್ಮ ರಾಜ್ಯಕ್ಕೆ ಇನ್ನೂ ದೊರೆತಿಲ್ಲ. ಸರ್ಕಾರದ ಶಿಕ್ಷಣದ ಬಗೆಗಿನ, ಅದರಲ್ಲೂ ಬಡ ರೈತ ಕಾರ್ಮಿಕರ ಮಕ್ಕಳು ಓದುವ ಸರ್ಕಾರಿ ಶಾಲೆಗಳ ಕುರಿತಾದ ಈ ನಿರ್ಲಕ್ಷ್ಯ ಧೋರಣೆಯನ್ನು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದೆ.
ಈ ಎಲ್ಲಾ ಗಂಭೀರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕಾದ ರಾಜ್ಯದ ಶಿಕ್ಷಣ ಇಲಾಖೆಗೆ ಪೂರ್ಣಪ್ರಮಾಣದ ಶಿಕ್ಷಣ ಮಂತ್ರಿಗಳೇ ಇಲ್ಲದಿರುವುದು ಅತ್ಯಂತ ವಿಪರ್ಯಾಸದ ಸಂಗತಿಯಾಗಿದೆ. ಬಡ, ರೈತ ಮತ್ತು ಕಾರ್ಮಿಕರ ಮಕ್ಕಳು ಓದುವ ಸರ್ಕಾರಿ ಶಾಲೆಗಳ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರವು ತಳೆದಿರುವ ಈ ಧೋರಣೆ ಖಂಡನೀಯ. ತಕ್ಷಣವೇ ರಾಜ್ಯಕ್ಕೆ ಶಿಕ್ಷಣ ಮಂತ್ರಿಗಳನ್ನು ನೇಮಕ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಅಗತ್ಯ ಸೌಲಭ್ಯಗಳನ್ನು ತಕ್ಷಣವೇ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಜೆ. ಯಾದವ್ ರೆಡ್ಡಿ ಹಾಗೂ ಚಿತ್ರದುರ್ಗ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ ಅವರು ಆಗ್ರಹಿಸಿದ್ದಾರೆ.









