ಸುದ್ದಿಒನ್,ಚಿತ್ರದುರ್ಗ, ಜುಲೈ. 31 : ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಂಪೂರ್ಣ ಉಚಿತ ವಸತಿ, ದಾಸೋಹ ಹಾಗೂ ಶಿಕ್ಷಣ ಸೌಲಭ್ಯಗಳೊಂದಿಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಆರೋಗ್ಯವೂ ಅತ್ಯಂತ ಮುಖ್ಯ ಎಂಬ ದೂರದೃಷ್ಟಿಯ ಚಿಂತನೆಯೊಂದಿಗೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಅನೇಕ ವಿನೂತನ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ಮಕ್ಕಳಿಗೆ ನೀಡುವ ಆಹಾರವು ಪೌಷ್ಟಿಕ, ಆರೋಗ್ಯಕರ ಹಾಗೂ ವಿಷಮುಕ್ತವಾಗಿರಬೇಕು ಎಂಬ ಆಶಯದಿಂದ, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಶಾಂತಿವನದಲ್ಲಿ ಯಾವುದೇ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳನ್ನು ಬಳಸದೆ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯುವ ವಿಶೇಷ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿವಿಧ ಬಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆಯಲಾಗುತ್ತಿದೆ.

ಈ ಕಾರ್ಯಕ್ರಮವು “ಪ್ರಧಾನ ಮಂತ್ರಿ ಪೋಷಣ್ ಶಕ್ತಿ” ಯೋಜನೆಯ ಆಶಯಗಳಿಗೆ ಪೂರಕವಾಗಿದ್ದರೂ, ಸರ್ಕಾರದ ಅನುದಾನವನ್ನು ಅವಲಂಬಿಸದೇ ಶ್ರೀಮಠದ ಸ್ವಂತ ಸಂಪನ್ಮೂಲಗಳಿಂದಲೇ ಅನುಷ್ಠಾನಗೊಳ್ಳುತ್ತಿರುವುದು ವಿಶೇಷವಾಗಿದೆ. ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸುವುದು ಸಮಾಜದ ಜವಾಬ್ದಾರಿ ಎಂಬ ಕಾಳಜಿಯಿಂದ ಪೂಜ್ಯರು ಈ ಯೋಜನೆಯನ್ನು ರೂಪಿಸಿದ್ದಾರೆ.

”ಉತ್ತಮ ಆರೋಗ್ಯವು ಉತ್ತಮ ಶಿಕ್ಷಣಕ್ಕೆ ದಾರಿಯಾಗುತ್ತದೆ; ಉತ್ತಮ ಆರೋಗ್ಯ ಮತ್ತು ಉತ್ತಮ ಶಿಕ್ಷಣವು ಮಕ್ಕಳ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಭದ್ರ ಬುನಾದಿಯಾಗುತ್ತದೆ” ಎಂಬುದು ಪೂಜ್ಯರ ಮೂಲ ಚಿಂತನೆಯಾಗಿದೆ. ವಿದ್ಯಾರ್ಥಿಗಳು ಆರೋಗ್ಯವಂತರಾಗಿದ್ದರೆ ಮಾತ್ರ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಆದ್ದರಿಂದ, ಶಿಕ್ಷಣ ನೀಡುವುದರ ಜೊತೆಗೆ ಪೌಷ್ಟಿಕ ಆಹಾರವನ್ನು ಒದಗಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯೂ ಹೌದು ಎಂಬ ನಂಬಿಕೆಯನ್ನು ಪೂಜ್ಯರು ಕಾರ್ಯರೂಪಕ್ಕೆ ತಂದಿದ್ದಾರೆ.
ಶಾಂತಿವನದಲ್ಲಿ ಹನಿ ನೀರಾವರಿ ಪದ್ಧತಿ ಹಾಗೂ ನೈಸರ್ಗಿಕ ಕೃಷಿ ವಿಧಾನಗಳ ಮೂಲಕ ಬಾಳೆ, ಪಪ್ಪಾಯಿ, ಮೂಲಂಗಿ, ಟೊಮ್ಯಾಟೊ, ವಿವಿಧ ಸೊಪ್ಪುಗಳು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಅವುಗಳನ್ನು ನೇರವಾಗಿ ವಿದ್ಯಾರ್ಥಿಗಳ ದಾಸೋಹಕ್ಕೆ ಬಳಸಲಾಗುತ್ತಿದೆ. ರಾಸಾಯನಿಕ ಮುಕ್ತ ಆಹಾರದ ಸೇವನೆಯಿಂದ ಮಕ್ಕಳ ಆರೋಗ್ಯ ಸುಧಾರಿಸುವುದರ ಜೊತೆಗೆ ಭವಿಷ್ಯದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೂ ಈ ಯೋಜನೆ ಮಹತ್ವದ ಕೊಡುಗೆ ನೀಡಲಿದೆ.

ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಾಮಾಜಿಕ ಕಾಳಜಿಯನ್ನು ಸಮನ್ವಯಗೊಳಿಸಿರುವ ಶ್ರೀ ತರಳಬಾಳು ಜಗದ್ಗುರುಗಳವರ ಈ ಯೋಜನೆಯು ಕೇವಲ ವಿದ್ಯಾರ್ಥಿಗಳ ಆಹಾರ ಭದ್ರತೆಯನ್ನು ಖಚಿತಪಡಿಸುತ್ತಿಲ್ಲ; ಬದಲಾಗಿ ಆರೋಗ್ಯವಂತ ಮಗು – ಸುಶಿಕ್ಷಿತ ಸಮಾಜ – ಸಮೃದ್ಧ ರಾಷ್ಟ್ರ ಎಂಬ ಪರಿಕಲ್ಪನೆಯನ್ನು ಸಾಕಾರಗೊಳಿಸುವ ದಿಸೆಯಲ್ಲಿ ಮಾದರಿ ಹೆಜ್ಜೆಯಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










