ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ.ಆ. 12 : ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಹಾಗೂ ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿ, ದಲಿತ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ನಾಯಕ ಸಮುದಾಯದ ಮುಖಂಡರು ಸುದ್ಧಿಗೋಷ್ಠಿಯಲ್ಲಿ ತೀವ್ರವಾಗಿ ಆರೋಪಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಬುಧವಾರ ಮಾತನಾಡಿದ ನಾಯಕ ಸಮುದಾಯದ ಮುಖಂಡರು, ಕಾಂಗ್ರೆಸ್ ಎಸ್.ಟಿ.ಘಟಕದ ಜಿಲ್ಲಾಧ್ಯಕ್ಷರಾದ ಬಿ. ಮಂಜುನಾಥ್ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಕೇಳಿಬಂದ ತಕ್ಷಣವೇ ನಾಗೇಂದ್ರ ಅವರು ರಾಜೀನಾಮೆ ನೀಡಿ ತನಿಖೆಗೆ ಪೂರ್ಣ ಸಹಕಾರ ನೀಡಿದ್ದರು. ಪ್ರಸ್ತುತ ವಿಶೇಷ ತನಿಖಾ ತಂಡ ಅವರಿಗೆ `ಕ್ಲೀನ್ ಚಿಟ್’ ನೀಡಿದ ನಂತರವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಇದನ್ನು ಸಹಿಸದ ಬಿಜೆಪಿ ನಾಯಕರು ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದ ಅವರು. ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದನ್ನು ವಿರೋಧಿಸುತ್ತಿರುವ ಬಿಜೆಪಿಯ ನಿಲುವನ್ನು ಅವರು ಖಂಡಿಸಿದ್ದಾರೆ.
ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಭಾಗದಲ್ಲಿ ಮಾಸ್ ಲೀಡರ್ ಆಗಿ ಹೊರಹೊಮ್ಮುತ್ತಿರುವ ನಾಗೇಂದ್ರ ಅವರನ್ನು ತುಳಿಯುವ ಉದ್ದೇಶದಿಂದ ಬಿಜೆಪಿ ನಾಯಕರು ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜೈಲಿಗೆ ಹೋಗಿ ಬಂದ ನಂತರವೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು ಹಾಗೂ 11 ವರ್ಷ ಜೈಲುವಾಸ ಅನುಭವಿಸಿ ಬಂದ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಮತ್ತೆ ಕರೆತಂದು ಸ್ವಾಗತಿಸಲಾಗಿದೆ. ಹಾಗಿರುವಾಗ ನಾಗೇಂದ್ರ ಅವರ ವಿಷಯದಲ್ಲಿ ಮಾತನಾಡಲು ಬಿಜೆಪಿಗೆ ಏನು ನೈತಿಕತೆ ಇದೆ ಎಂದು ಬಿ.ವೈ.ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು.
ರಾಜ್ಯದಲ್ಲಿ ಬರಗಾಲದಂತಹ ಗಂಭೀರ ಸಮಸ್ಯೆಗಳಿದ್ದರೂ ಬಿಜೆಪಿ ನಾಯಕರು ಅದರ ಬಗ್ಗೆ ಮಾತನಾಡದೆ ಕೇವಲ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯತೆ ಗಳಿಸುತ್ತಿರುವುದನ್ನು ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಹಿಂದುಳಿದ ಹಾಗೂ ಪರಿಶಿಷ್ಟ ವರ್ಗದ ನಾಯಕರನ್ನು ತುಳಿಯುವ ಕೆಲಸವನ್ನು ಬಿಜೆಪಿ ತಕ್ಷಣವೇ ನಿಲ್ಲಿಸಬೇಕು. ಒಂದು ವೇಳೆ ಇದೇ ಧೋರಣೆಯನ್ನು ಮುಂದುವರಿಸಿದರೆ, ಬರುವ 2028ರ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಾಯಕ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಸಮಾಜದ ಮುಖಂಡರಾದ ಬಸವರಾಜು ಮಾತನಾಡಿ, ಸಚಿವ ಬಿ. ನಾಗೇಂದ್ರ ಅವರಿಗೆ ನಾಯಕ ಸಮುದಾಯ ನೈತಿಕ ಬೆಂಬಲ ಸೂಚಿಸುತ್ತಿದೆ. ಬಿಜೆಪಿ ನಾಯಕರಾದ ಬಿ. ವೈ. ವಿಜಯೇಂದ್ರ ಹಾಗೂ ಗಾಲಿ ಜನಾರ್ದನ ರೆಡ್ಡಿ ಅವರು ಸಮುದಾಯದ ನಾಯಕರನ್ನು ಎತ್ತಿಕಟ್ಟಿ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಬಿ. ಶ್ರೀರಾಮುಲು ಅವರನ್ನು ಮುಂದಿಟ್ಟುಕೊಂಡು ಜಾತಿ ಒಡೆಯುವ ಪ್ರಯತ್ನ ನಡೆಯುತ್ತಿದ್ದು, ಇಂತಹ ಕಿಡಿಗೇಡಿತನವನ್ನು ದಲಿತ ಹಾಗೂ ಹಿಂದುಳಿದ ಸಮುದಾಯ ಸಹಿಸುವುದಿಲ್ಲ ಎಂದು ಎಚ್ಚರಿಸಿ ಕಳೆದ ಚುನಾವಣೆಯಲ್ಲಿ ಚುನಾವಣೆ ಪ್ರಚಾರಕ್ಕಾಗಿ ರಮೇಶ್ ಜಾರಕಿಹೊಳಿ ಹಾಗೂ ಬಿ. ಶ್ರೀರಾಮುಲು ಅವರನ್ನು ಬಳಸಿಕೊಳ್ಳುವ ಬಿಜೆಪಿ, 15 ಮೀಸಲಾತಿ ಕ್ಷೇತ್ರಗಳಲ್ಲಿ ಒಂದೇ ಒಂದು ಖಾತೆಯನ್ನು ತೆರೆಯಲು ಸಾಧ್ಯವಾಗಿಲ್ಲ ಎಂದು ದೂರಿದರು.
ಬಿಜೆಪಿಯಲ್ಲಿ ಅನೇಕ ಕಳಂಕಿತ ನಾಯಕರಿದ್ದರೂ ಅವರನ್ನು ಸಚಿವರು ಹಾಗೂ ಮುಖ್ಯಮಂತ್ರಿಗಳನ್ನಾಗಿ ಮಾಡಲಾಗಿದೆ ಆದರೆ, 187 ಕೋಟಿ ರೂ. ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಕ್ಲೀನ್ ಚೀಟ್ ನೀಡಿದ್ದರೂ, ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪದೇ ಪದೇ ಬಿಜೆಪಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿ ಬಿ. ನಾಗೇಂದ್ರ ಅವರು ಮತ್ತೆ ಮಂತ್ರಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಬಿಜೆಪಿ ತನ್ನ ಕುತಂತ್ರ ರಾಜಕಾರಣವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಈ ರೀತಿ ಕುತಂತ್ರ ಮುಂದುವರಿದರೆ, ರಾಜ್ಯಾದ್ಯಂತ ಬಿಜೆಪಿ ನಾಯಕರ ವಿರುದ್ಧ ಉಗ್ರ ಪ್ರತಿಭಟನೆ ಮತ್ತು ಬಹಿಷ್ಕಾರ ಎದುರಿಸಬೇಕಾಗುತ್ತದೆ ಹಾಗೂ ಬಿ.ವೈ.ವಿಜಯೇಂದ್ರ ಹಾಗೂ ಜನಾರ್ದನ ರೆಡ್ಡಿ ಅವರ ಪ್ರವಾಸಕ್ಕೆ ಕಪ್ಪು ಪಟ್ಟಿ ಪ್ರದರ್ಶಿಸಿ, ಮುತ್ತಿಗೆ ಹಾಕಿ ಬಹಿಷ್ಕಾರ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಗೋಷ್ಟಿಯಲ್ಲಿ ಸಮಾಜದ ಮುಖಂಡರುಗಳಾದ ಚೇತನ್ ಕುಮಾರ್, ಬೋರಯ್ಯ, ಶಶಿಧರ್, ಮಂಜುನಾಥ್ ಪಾಳೇಗಾರ್ ಉಪಸ್ಥಿತರಿದ್ದರು.










