Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ: ಖಾಲಿ ಸರ್ಕಾರಿ ಜಮೀನು ಗುರುತಿಸಲು ಸರ್ಕಾರ ಸೂಚನೆ

---Advertisement---

ರಾಜ್ಯದಾದ್ಯಂತ ನಿವೇಶನಕ್ಕಾಗಿ ಕಾಯುತ್ತಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಿದ್ದು, ಇದಕ್ಕಾಗಿ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ ನಿವೇಶನಗಳಾಗಿ ಅಭಿವೃದ್ಧಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿರುವ ಸರ್ಕಾರಿ ಜಮೀನುಗಳ ವಿವರ ಸಂಗ್ರಹಿಸಿ, ನಿವೇಶನ ರಚನೆಗೆ ಸೂಕ್ತವಾಗಿರುವ ಭೂಮಿಯನ್ನು ತ್ವರಿತವಾಗಿ ಗುರುತಿಸುವಂತೆ ಸೂಚಿಸಿದ್ದಾರೆ.

ಸರ್ಕಾರದ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಉದ್ದೇಶ ಹೊಂದಲಾಗಿದೆ.ಈ ಕುರಿತು ಮಾತನಾಡಿರುವ ಪರಮೇಶ್ವರ, ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ವಸತಿ ರಹಿತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಜಮೀನುಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಅಗತ್ಯ ಮೂಲಸೌಕರ್ಯಗಳೊಂದಿಗೆ ನಿವೇಶನ ಒದಗಿಸಿ, ಎಲ್ಲರಿಗೂ ಸ್ವಂತ ಸೂರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ನಿವೇಶನ ನಿರ್ಮಾಣಕ್ಕೆ ಸೂಕ್ತವಾಗಿರುವ ಖಾಲಿ ಸರ್ಕಾರಿ ಜಮೀನುಗಳನ್ನು ಯಾವುದೇ ವಿಳಂಬವಿಲ್ಲದೆ ಗುರುತಿಸಿ, ಭೂಮಿಯನ್ನು ಅಭಿವೃದ್ಧಿಪಡಿಸಲು ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ನೀಡಿರುವ ಭರವಸೆಗಳನ್ನು ಹಂತ ಹಂತವಾಗಿ ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ.ಇದೇ ವೇಳೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪರಮೇಶ್ವರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ-2020ರ ಮಾರ್ಗಸೂಚಿಗಳ ಆಧಾರದಲ್ಲಿ ಮಳೆ ಕೊರತೆ, ಬಿತ್ತನೆ ಪ್ರಗತಿ, ಸಸ್ಯವರ್ಗದ ಸೂಚ್ಯಂಕ, ಮಣ್ಣಿನ ತೇವಾಂಶ ಹಾಗೂ ಜಲವಿಜ್ಞಾನ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಶೀಲಿಸಲಾಗುತ್ತಿದೆ. ಮೊಬೈಲ್ ಆ್ಯಪ್ ಮೂಲಕ ಸ್ಥಳ ಪರಿಶೀಲನೆಯೂ ನಡೆಯುತ್ತಿದ್ದು, ನಿಯಮಾನುಸಾರ ಬರಪೀಡಿತ ತಾಲೂಕು ಘೋಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.ಬರದಿಂದ ರೈತರು ಹಾಗೂ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ವಿಬಿಜಿ ರಾಮ್‌ಜಿ ಯೋಜನೆಯಡಿ ಜಲ ಸಂರಕ್ಷಣೆ, ಕೆರೆ-ತೂಬುಗಳ ಹೂಳೆತ್ತುವಿಕೆ, ಕೃಷಿ ಹೊಂಡ, ಚೆಕ್‌ಡ್ಯಾಂ, ನಾಲಾ ಬಂದ್, ಇಂಗು ಗುಂಡಿ ಹಾಗೂ ಇತರ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now