ಮಧ್ಯ ಆಫ್ರಿಕಾ.ಆಗಸ್ಟ್.19: ಮಧ್ಯ ಆಫ್ರಿಕಾ ಗಣರಾಜ್ಯದ ಪಶ್ಚಿಮ ಭಾಗದಲ್ಲಿ ನಡೆದ ಭೀಕರ ಗಣಿ ದುರಂತದಲ್ಲಿ ಕನಿಷ್ಠ 30 ಚಿನ್ನದ ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಇನ್ನೂ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ನಾನಾ-ಮಂಬೆರೆ ಪ್ರಿಫೆಕ್ಚರ್ನ ಅಬ್ಬಾ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಸಣ್ಣ ಪ್ರಮಾಣದ, ಸಾಂಪ್ರದಾಯಿಕ ರೀತಿಯಲ್ಲಿ ನಡೆಸಲಾಗುತ್ತಿದ್ದ ಚಿನ್ನದ ಗಣಿಯ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದೆ.
ಗಣಿ ಕುಸಿದ ಬಳಿಕ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 30 ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗಾಯಗೊಂಡ ಕೆಲ ಕಾರ್ಮಿಕರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಣಿಯಲ್ಲಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಬದುಕುಳಿದ ಕಾರ್ಮಿಕ ಫ್ಲೋರಿಯನ್ ಗಾಗುಯೆಂಡೆ ತಿಳಿಸಿದ್ದಾರೆ. ಆದರೆ, ಸಮಯ ಕಳೆದಂತೆ ಸಿಲುಕಿರುವವರನ್ನು ಜೀವಂತವಾಗಿ ರಕ್ಷಿಸುವ ಸಾಧ್ಯತೆ ಕಡಿಮೆಯಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಉಪಮೇಯರ್ ಸೌಲೆಮೇನ್ ಬಿ ಅವರು ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ನೆರವು ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ. ಸರ್ಕಾರದ ವಕ್ತಾರ ಎವರಿಸ್ಟ್ ನ್ಗಾಮಾನಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ನೆರವು ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮಧ್ಯ ಆಫ್ರಿಕಾ ಗಣರಾಜ್ಯದಲ್ಲಿ ಸಣ್ಣ ಪ್ರಮಾಣದ ಗಣಿಗಾರಿಕೆ ವ್ಯಾಪಕವಾಗಿದ್ದು, ಸೂಕ್ತ ಸುರಕ್ಷತಾ ವ್ಯವಸ್ಥೆಗಳ ಕೊರತೆಯಿಂದ ಇಂತಹ ಗಣಿ ದುರಂತಗಳು ಸಂಭವಿಸುತ್ತಿವೆ. ಈ ದುರಂತವೂ ಗಣಿಗಾರರ ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕ ಮೂಡಿಸಿದೆ.











