ಬೆಂಗಳೂರು.ಆಗಸ್ಟ್.19: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆಗಳಿಗೆ ನೀರು ಹರಿಸುವ ಕುರಿತು ಬೆಂಗಳೂರಿನ ವಿಕಾಸಸೌಧದಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಚಿವ ಮಧು ಬಂಗಾರಪ್ಪ ವಹಿಸಿದ್ದರು.
ಸಭೆಯಲ್ಲಿ ಭದ್ರಾ ಜಲಾಶಯದಲ್ಲಿರುವ ಪ್ರಸ್ತುತ ನೀರಿನ ಸಂಗ್ರಹ, ಜಲಾಶಯದ ಸ್ಥಿತಿಗತಿ ಸೇರಿದಂತೆ ವಿವಿಧ ಅಂಶಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಮುಂಗಾರು ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ನೀರು ಹರಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ.
ಜಲಾಶಯದಲ್ಲಿನ ನೀರಿನ ಲಭ್ಯತೆ ಹಾಗೂ ರೈತರ ಅಗತ್ಯಗಳನ್ನು ಪರಿಗಣಿಸಿ, ನೀರು ಹರಿಸುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರದಲ್ಲೇ ಚರ್ಚಿಸಲಾಗುವುದು. ಬಳಿಕ ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರೈತರ ಶ್ರೇಯೋಭಿವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.










