ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿದ ಸಚಿವರು ಮಾತನಾಡಿದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಎಲ್ಲಾ ಬೇಡಿಕೆಗಳನ್ನು ಒಂದೇ ಬಾರಿಗೆ ಈಡೇರಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಶೈಕ್ಷಣಿಕ ಚಟುವಟಿಕೆಗಳು, ಕಾಲೇಜಿನಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ಸಚಿವರ ಗಮನಕ್ಕೆ ತಂದರು.ವಿದ್ಯಾರ್ಥಿಗಳು ಪ್ರಸ್ತಾಪಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದರು.









