ಶಿವಮೊಗ್ಗ.ಆಗಸ್ಟ್.23: ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಉಚಿತ ನೋಟ್‌ಬುಕ್‌ಗಳನ್ನು ವಿತರಿಸುವ ಯೋಜನೆಯಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ, ಸರ್ಕಾರಿ ಪಿಯು ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳು ಹಾಗೂ ಕಾಲೇಜಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಮುಂದೆ ಹಂಚಿಕೊಂಡರು. ಈ ಕುರಿತು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಸಚಿವರು ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಹಂತ ಹಂತವಾಗಿ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಭರವಸೆ ನೀಡಿದರು.









