Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

---Advertisement---

ಹಾವೇರಿ.ಆಗಸ್ಟ್.23 : ಹಾವೇರಿ ಜಿಲ್ಲೆಯ ಶಿಗ್ಗಾವಿಯ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಹಾಗೂ ಕೋಮು ಸೌಹಾರ್ದತೆ ಕಾಪಾಡಲು ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರು ಬೆಂಬಲಿಸಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ  ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 21ರಂದು ಶಿಗ್ಗಾವಿಯ ಟ್ಯಾಕ್ಸಿ ಸ್ಟ್ಯಾಂಡ್‌ನಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಘಟನೆ ಅತ್ಯಂತ ಹೇಯ ಮತ್ತು ಖಂಡನೀಯ. ದೇವಸ್ಥಾನದೊಳಗೆ ಉದ್ದೇಶಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿರುವ ಆರೋಪದ ಕುರಿತು ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಕೇವಲ ಒಂದು ದೇವಸ್ಥಾನಕ್ಕೆ ಸಂಬಂಧಿಸಿದ ಘಟನೆ ಎಂದು ಪರಿಗಣಿಸದೆ, ಶಿಗ್ಗಾವಿಯ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಗಂಭೀರ ವಿಚಾರವಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ಪರಿಗಣಿಸಬೇಕು. ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಅಗತ್ಯವಿದ್ದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಹೇಳಿದ್ದಾರೆ.

ಶಿಗ್ಗಾವಿ-ಸವಣೂರು ಭಾಗದಲ್ಲಿ ಹಲವು ವರ್ಷಗಳಿಂದ ಎಲ್ಲ ಸಮುದಾಯದವರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಯಾವುದೇ ದುಷ್ಟಶಕ್ತಿಗಳು ಕೋಮು ಭಾವನೆ ಕೆರಳಿಸಿ ಈ ಶಾಂತಿಯನ್ನು ಕದಡುವುದಕ್ಕೆ ಅವಕಾಶ ನೀಡಬಾರದು ಎಂದರು.

ಆರೋಪಿಯನ್ನು ಬಂಧಿಸಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ. ನ್ಯಾಯಾಲಯದಲ್ಲಿ ಸೂಕ್ತ ಕಾನೂನು ಕ್ರಮ ಮುಂದುವರಿದು, ಇಂತಹ ಕೃತ್ಯಗಳಿಗೆ ಮತ್ತೆ ಅವಕಾಶವಾಗದಂತೆ ಕಠಿಣ ಸಂದೇಶ ನೀಡಬೇಕು. ಇದೇ ವೇಳೆ, ಪೊಲೀಸರು ಪ್ರಕರಣವನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ

ಈ ಹಿನ್ನೆಲೆಯಲ್ಲಿ ಟ್ಯಾಕ್ಸಿ ಸ್ಟ್ಯಾಂಡ್‌ನವರು ಹಾಗೂ ಪ್ರಮೋದ್ ಮುತಾಲಿಕ್ ಅವರು ಕರೆ ನೀಡಿರುವ ಶಿಗ್ಗಾವಿ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಈ ಬಂದ್ ಯಾವುದೇ ಕೋಮಿನ ವಿರುದ್ಧವಾಗಿಲ್ಲ. ಇದು ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದ ಹೋರಾಟವಾಗಿದೆ. ಹಿಂಸಾಚಾರ ಅಥವಾ ಕೋಮು ಸಂಘರ್ಷಕ್ಕೆ ಯಾರೂ ಅವಕಾಶ ನೀಡಬಾರದು. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿ, ಶಾಂತಿಯುತವಾಗಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಶಿಗ್ಗಾವಿ ಮಾತ್ರವಲ್ಲದೆ ಹಾವೇರಿ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು, ಇಸ್ಪೀಟ್-ಒಸಿ, ಮಾದಕ ವಸ್ತುಗಳ ದಂಧೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧವೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು.ಕಾನೂನು ಎಲ್ಲರಿಗೂ ಒಂದೇ. ಅಪರಾಧಿಗಳಿಗೆ ಯಾವುದೇ ರಾಜಕೀಯ ಅಥವಾ ಸಾಮಾಜಿಕ ರಕ್ಷಣೆ ಇರಬಾರದು. ಶಿಗ್ಗಾವಿಯ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ಹೋರಾಟಕ್ಕೆ ಪಕ್ಷಾತೀತವಾಗಿ, ಜಾತಿ-ಮತ ಭೇದವಿಲ್ಲದೆ ಎಲ್ಲರೂ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.

Join WhatsApp

Join Now

Join Telegram

Join Now