ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಕರ್ನಾಟಕದ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಿದೆ.ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿಕೊಂಡು ತಪ್ಪುಗಳಿದ್ದರೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿ ಆಗಸ್ಟ್ 24ರಿಂದ ಸೆಪ್ಟೆಂಬರ್ 23, 2026ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಈ ಅವಧಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳು ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವ ಪ್ರಕ್ರಿಯೆ ಅಕ್ಟೋಬರ್ 22, 2026ರವರೆಗೆ ನಡೆಯಲಿದೆ.
ಯಾವ ಅರ್ಜಿ ಯಾವ ನಮೂನೆ?
ನಮೂನೆ 6: ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು
ನಮೂನೆ 6ಎ: ವಿದೇಶದಲ್ಲಿರುವ ಭಾರತೀಯ ಮತದಾರರ ನೋಂದಣಿಗೆ
ನಮೂನೆ 7: ಹೆಸರು ತೆಗೆದುಹಾಕುವಿಕೆ
ನಮೂನೆ 8: ನಿವಾಸ ಸ್ಥಳ ಬದಲಾವಣೆ/ನಮೂದುಗಳ ತಿದ್ದುಪಡಿ/ಎಪಿಕ್ ಬದಲಾವಣೆ, ಪಿಡಬ್ಲ್ಯೂಡಿ ಗುರುತು ದಾಖಲಿಸುವುದು
ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು https://voters.eci.gov.in ಮೂಲಕ ಪರಿಶೀಲಿಸಬಹುದು. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (BLO) ಅಥವಾ ಚುನಾವಣಾ ನೋಂದಣಿ ಅಧಿಕಾರಿ (ERO) ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಮೇಲ್ಮನವಿಗೂ ಅವಕಾಶ
ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಕುರಿತು ಕೈಗೊಳ್ಳುವ ನಿರ್ಧಾರದ ವಿರುದ್ಧವೂ ನಿಯಮಾನುಸಾರ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಅರ್ಜಿಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಮುನ್ನವೇ ಪ್ರತಿಯೊಬ್ಬರೂ ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿಕೊಂಡು, ಯಾವುದೇ ತಪ್ಪು ಕಂಡುಬಂದರೆ ಸೆಪ್ಟೆಂಬರ್ 23ರೊಳಗೆ ಅಗತ್ಯ ಅರ್ಜಿ ಅಥವಾ ಆಕ್ಷೇಪಣೆ ಸಲ್ಲಿಸುವುದು ಮುಖ್ಯವಾಗಿದೆ.
ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಈಗಲೇ ನಿಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಿ.












