ಬೆಂಗಳೂರು.ಆಗಸ್ಟ್.24: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆಗಸ್ಟ್ 24ರಿಂದ 26ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಗಾಳಿಯ ವೇಗ 60 ಕಿ.ಮೀ.ವರೆಗೂ ತಲುಪಬಹುದು.
ಆಗಸ್ಟ್ 24ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗಬಹುದು.
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಮಳೆಯ ಮುನ್ಸೂಚನೆ ನೀಡಲಾಗಿದೆ.
ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಆಗಸ್ಟ್ 27ರಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು.










