Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ಐಆರ್‌ ಕರಡು ಪಟ್ಟಿ ಪ್ರಕಟ: ಚಿತ್ರದುರ್ಗದಲ್ಲಿ 12.97 ಲಕ್ಷ ಮತದಾರರು; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

---Advertisement---

ಚಿತ್ರದುರ್ಗ. ಆ.24:  ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 12,97,789 ಮತದಾರರು ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿದ್ದ ಒಟ್ಟು 14,40,534 ಮತದಾರರ ಪೈಕಿ ಶೇ 90.09 ರಷ್ಟು ಅಂದರೆ 12,97,789 ಮತದಾರರ ಮಾಹಿತಿ ಪರಿಶೀಲಿಸಿ ಕರಡು ಪಟ್ಟಿಗೆ ತರಲಾಗಿದೆ ಎಂದು ಹೇಳಿದರು.
ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ಒಟ್ಟು 1,42,745 ಮತದಾರರ ಪೈಕಿ 30,854 ಮಂದಿ ಮೃತಪಟ್ಟಿದ್ದರೆ, 70,525 ಮತದಾರರು ಶಾಶ್ವತವಾಗಿ ವಲಸೆ ಹೋಗಿದ್ದಾರೆ. 21,537 ಡಬಲ್ ಎಂಟ್ರಿ ಹಾಗೂ ಮೂರ್ನಾಲ್ಕು ಬಾರಿ ಭೇಟಿ ನೀಡಿದರೂ ಸ್ಥಳದಲ್ಲಿ ಲಭ್ಯವಿಲ್ಲದ 18,837 ಗೈರುಹಾಜರಿ ಮತದಾರರು ಹಾಗೂ 992 ಇತರೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಇಂದಿನಿಂದ ಸೆಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗಳು, ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ಬಿಎಲ್‍ಒ ಕೇಂದ್ರಗಳಲ್ಲಿ ಒಟ್ಟು 106 ಜನ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರಿನ ಕಾಗುಣಿತ, ವಿಳಾಸ ಸೇರಿದಂತೆ ಸಣ್ಣಪುಟ್ಟ ತಿದ್ದುಪಡಿಗಳಿರುವ ಸುಮಾರು 68,000 ಮತದಾರರಿದ್ದಾರೆ. ಇವರೆಲ್ಲರಿಗೂ ನೋಟಿಸ್ ನೀಡಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಇಆರ್‍ಒ ಹಂತದಲ್ಲಿ ಕರೆಸಿ ಸೂಕ್ತ ದಾಖಲೆಗಳನ್ನು ಪಡೆದು ತಿದ್ದುಪಡಿ ಸರಿಪಡಿಸಲಾಗುವುದು ಎಂದರು.

18,875 ‘ನೋ ಮ್ಯಾಪಿಂಗ್’ ಪ್ರಕರಣಗಳಿಗೆ ಜಿಲ್ಲಾಧಿಕಾರಿಯಿಂದಲೇ ನೋಟಿಸ್: ಮ್ಯಾಪಿಂಗ್ ವೇಳೆ ಪತ್ತೆಯಾಗದಿದ್ದ 18,875 ‘ನೋ ಮ್ಯಾಪಿಂಗ್’ ಮತದಾರರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹಂತದಲ್ಲೇ ಸ್ವತಃ ನೋಟಿಸ್ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಈ ಹಿಂದೆ ಮನೆ ಮನೆ ಮ್ಯಾಪಿಂಗ್ ನಡೆಸಿದಾಗ ಸಿಗದಿರುವ, ಆದರೆ ಎನ್ಯುಮರೇಷನ್ ಫಾರ್ಮ್ ಸಲ್ಲಿಸಿದಾಗ ಪತ್ತೆಯಾಗಿರುವ 18,875 ‘ನೋ ಮ್ಯಾಪಿಂಗ್’ ಪ್ರಕರಣಗಳಿವೆ. ಇವರು ಹಿಂದೆ ಮ್ಯಾಪಿಂಗ್ ವೇಳೆ ಏಕೆ ಸಿಗಲಿಲ್ಲ? ಪ್ರಸ್ತುತ ಎಲ್ಲಿ ವಾಸವಿದ್ದಾರೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ನಾನೇ ಖುದ್ದಾಗಿ ನೋಟಿಸ್ ಜಾರಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರಿದ್ದರೆ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

103 ಹೊಸ ಮತಗಟ್ಟೆಗಳ ಸ್ಥಾಪನೆ: ಜಿಲ್ಲೆಯಲ್ಲಿ ಈ ಹಿಂದೆ 1661 ಮತಗಟ್ಟೆ ಕೇಂದ್ರಗಳಿದ್ದವು. 1,200ಕ್ಕಿಂತ ಹೆಚ್ಚು ಮತದಾರರಿರುವ ಕೇಂದ್ರಗಳನ್ನು ಗುರುತಿಸಿ, ಸುಲಭ ಮತದಾನಕ್ಕಾಗಿ 103 ಹೆಚ್ಚುವರಿ ಶಾಶ್ವತ ಮತದಾನ ಕೇಂದ್ರಗಳನ್ನು ನೂತನವಾಗಿ ಸ್ಥಾಪಿಸಲಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ ಕೇಂದ್ರಗಳ ಸಂಖ್ಯೆ 1764ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಎಎಸ್‍ಡಿಡಿಒ ಪಟ್ಟಿಯಲ್ಲಿ ಚಿತ್ರದುರ್ಗ ರಾಜ್ಯಕ್ಕೇ 5ನೇ ಸ್ಥಾನ: ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಎಎಸ್‍ಡಿಡಿಒ (ಮರಣ, ಶಾಶ್ವತ ವಲಸೆ, ಡಬಲ್ ಎಂಟ್ರಿ, ಗೈರು ಹಾಜರು ಹಾಗೂ ಇತರೆ) ಪ್ರಮಾಣ ಅತ್ಯಂತ ಕಡಿಮೆಯಿದೆ. ರಾಜ್ಯದ ಸರಾಸರಿ ಶೇ. 20ಕ್ಕಿಂತ ಹೆಚ್ಚಿದ್ದರೆ, ನಮ್ಮ ಜಿಲ್ಲೆಯಲ್ಲಿ ಕೇವಲ ಶೇ. 9.91 ರಷ್ಟು ಮಾತ್ರ ಎಎಸ್‍ಡಿಡಿಒ ಪಟ್ಟಿಯಲ್ಲಿದ್ದಾರೆ. ಎಎಸ್‍ಡಿಡಿಒ ಪಟ್ಟಿಯಲ್ಲಿ ಚಿತ್ರದುರ್ಗ ರಾಜ್ಯಕ್ಕೆ 5ನೇ ಸ್ಥಾನದಲ್ಲಿದ್ದು, ಅತ್ಯುತ್ತಮ ಗುಣಮಟ್ಟದ ಮತದಾರರ ಪಟ್ಟಿ ಸಿದ್ದಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಇಆರ್‍ಒ/ಎಇಆರ್‍ಒಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ದೂರುಗಳಿದ್ದರೂ ತಾಲೂಕು ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ ಇದ್ದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಸಂಬಂಧ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಭೆ ನಡೆಯಿತು.
ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ www.ceokarnataka.kar.nic.in ಮತ್ತು https//chitradurga.nic.in ವೆಬ್‍ಸೈಟ್‍ನಲ್ಲಿಯೂ ಪರಿಶೀಲಿಸಿಕೊಂಡು ಈ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಅರ್ಜಿಗಳನ್ನು ECINET APP ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟು ಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಮೂನೆಗಳಲ್ಲಿ ಆಗಸ್ಟ್ 24 ರಿಂದ ಅಕ್ಟೋಬರ್ 22 ರೊಳಗೆ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಕುಮಾರ್, ಸಿಪಿಐ ಡಿಒಸಿ ಗೌಸ್‍ಪೀರ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now